ಪಿಯು ಕಾಲೇಜು ಹುದ್ದೆ ಭರ್ತಿ: ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ

ಕರವೇ ಜಿಲ್ಲಾ ಅಧ್ಯಕ್ಷ ಸೋಮನಾಥ ಮುಧೋಳ ಆರೋಪ
bidar
ಸೋಮನಾಥ ಮುಧೋಳ
Published on: 

ಬೀದರ್: ರಾಜ್ಯ ಸರ್ಕಾರವು ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಆರೋಪಿಸಿದ್ದಾರೆ.
ಸರ್ಕಾರ, 814 ಹುದ್ದೆಗಳ ಪೈಕಿ 36 ಹುದ್ದೆಗಳನ್ನು ಮಾತ್ರ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿರಿಸಿರುವುದು ಪ್ರಾದೇಶಿಕ ಅಸಮಾನತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗವನ್ನು ಹಿಂದಿನಿಂದಲೂ ಕಡೆಗಣಿಸುತ್ತ ಬರಲಾಗಿದೆ. ಆದರೂ, ಈ ಭಾಗದ ಚುನಾಯಿತ ಪ್ರತಿನಿಧಿಗಳು ಮೌನ ವಹಿಸಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿಷಯವಾರು ಉಪನ್ಯಾಸಕರ ಬಹಳಷ್ಟು ಹುದ್ದೆಗಳು ಖಾಲಿ ಇವೆ. ಆದರೆ, 36 ಹುದ್ದೆ ಮಾತ್ರ ಭರ್ತಿ ಮಾಡುತ್ತಿರುವುದು ಆಘಾತ ಉಂಟು ಮಾಡಿದೆ. ಇದು, ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಉಂಟು ಮಾಡಲಿದೆ ಎಂದು ತಿಳಿಸಿದ್ದಾರೆ.
ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲು ಕಲ್ಪಿಸುವುದಕ್ಕಾಗಿಯೇ ಸಂವಿಧಾನದ 371(ಜೆ) ಕಲಂಗೆ ತಿದ್ದುಪಡಿ ತಂದು ಈ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದೆ. ಅದರ ಉದ್ದೇಶ ಈಡೇರಿಕೆಗಾಗಿ ಅವಶ್ಯಕ ಇರುವಷ್ಟು ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.
ಸರ್ಕಾರ ಈ ದಿಸೆಯಲ್ಲಿ ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.