ಖಾಸಗಿ ಶಾಲಾ, ಕಾಲೇಜುಗಳಿಂದ ಬೃಹತ್ ಪ್ರತಿಭಟನೆ

ಅನುದಾನಕ್ಕೆ ಒತ್ತಾಯಿಸಿ ಖಾಸಗಿ ಶಾಲಾ, ಕಾಲೇಜುಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಬೀದರ್‍ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು
ಅನುದಾನಕ್ಕೆ ಒತ್ತಾಯಿಸಿ ಖಾಸಗಿ ಶಾಲಾ, ಕಾಲೇಜುಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಬೀದರ್‍ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು
Published on

ಬೀದರ್: 1995ರ ನಂತರದ ಖಾಸಗಿ ಶಾಲಾ, ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಖಾಸಗಿ ಶಾಲಾ, ಕಾಲೇಜುಗಳ ಆಡಳಿತ ಮಂಡಳಿ ಸದಸ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ವೃತ್ತದಿಂದ ಕೈಯಲ್ಲಿ ಫಲಕ ಹಿಡಿದು, ಘೋಷಣೆ ಕೂಗುತ್ತಾ ಕೆ.ಎಚ್.ಬಿ. ಕಾಲೊನಿ ಮಾರ್ಗವಾಗಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದರು.
ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದರು.
ಇದಕ್ಕೂ ಮುನ್ನ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಅವರು, ಸಂಘದ ಮುಷ್ಕರದ ಕರೆಗೆ ರಾಜ್ಯದಾದ್ಯಂತ ವ್ಯಾಪಕ ಬೆಂಬಲ ದೊರಕಿದೆ. ಖಾಸಗಿ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಶಾಲಾ, ಕಾಲೇಜು ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ 1995 ರ ನಂತರದ ಖಾಸಗಿ ಶಾಲಾ, ಕಾಲೇಜುಗಳಿಗೆ ಅನುದಾನ ಕಲ್ಪಿಸಬೇಕು. ಮಾನ್ಯತೆ ನವೀಕರಣ ಪ್ರಕ್ರಿಯೆ ಸರಳೀಕರಿಸಬೇಕು ಹಾಗೂ ಆರ್.ಟಿ.ಇ. ಖಾಸಗಿ ಶಾಲೆಗಳಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಖಾಸಗಿ ಶಾಲಾ, ಕಾಲೇಜುಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ವಿಳಂಬ ಮಾಡಿದ್ದಲ್ಲಿ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗ ದೇವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಂದ್ರ ಮಣಗೇರಿ, ಪ್ರಧಾನ ಕಾರ್ಯದರ್ಶಿ ಗುರುನಾಥ ರೆಡ್ಡಿ, ಖಜಾಂಚಿ ಗಣಪತಿ ಸೋಲಪುರ, ಬೀದರ್ ತಾಲ್ಲೂಕು ಅಧ್ಯಕ್ಷ ಸಂದೀಪ್ ಶೆಟಕಾರ್, ಹುಮನಾಬಾದ್ ತಾಲ್ಲೂಕು ಅಧ್ಯಕ್ಷ ಸುರೇಂದ್ರ ಹುಡಗಿಕರ್, ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ಧನರಾಜ ದೊಡ್ಡಮನಿ, ಕಮಲನಗರ ತಾಲ್ಲೂಕು ಅಧ್ಯಕ್ಷ ಸಂಜುಕುಮಾರ ಕಂಟಾಳೆ, ಔರಾದ್ ತಾಲ್ಲೂಕು ಅಧ್ಯಕ್ಷ ಸಂಜೀವ್ ಶೆಟಕಾರ್, ಪ್ರಮುಖರಾದ ಮಾಣಿಕಪ್ಪ ಗೋರನಾಳೆ, ಗುಂಡಯ್ಯ ತೀರ್ಥ, ಚಿಟಗುಪ್ಪದ ಸುರೇಶ್ ಚೌಧರಿ ಮತ್ತಿತರರು ಭಾಗವಹಿಸಿದ್ದರು. ಖಾಸಗಿ ಶಾಲಾ, ಕಾಲೇಜುಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆ ಕಾರಣ ಜಿಲ್ಲೆಯಾದ್ಯಂತ ಖಾಸಗಿ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net