ಯದುವೀರ್‌ಗೆ ಚಾಮರಾಜ ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ : ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ವಿಶ್ವಾಸ

13
Published on

ಮೈಸೂರು: ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಚಾಮರಾಜ ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ಬರಲಿದೆ ಎಂದು ಕ್ಷೇತ್ರದ ಮಾಜಿ ಶಾಸಕರೂ ಆದ ಪಕ್ಷದ ನಗರಾಧ್ಯಕ್ಷ ಎಲ್.ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜ ಕ್ಷೇತ್ರದ ವಾರ್ಡ್ ನಂ. 2 ವ್ಯಾಪ್ತಿಯ ಮಂಚೇಗೌಡನಕೊಪ್ಪಲಿನಲ್ಲಿ ಗುರುವಾರ ಎನ್‌ಡಿಎ ಅಭ್ಯರ್ಥಿ ಪರ ಬಿರುಸಿನ ಮತಯಾಚಿಸಿ ಮಾತನಾಡಿದರು.

ಕ್ಷೇತ್ರ ಸೇರಿದಂತೆ ಜಿಲ್ಲಾದ್ಯಂತ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೆ ಕ್ಷೇತ್ರದಲ್ಲಿ ಜನರು ಸ್ವಯಂ ಪ್ರೇರಿತರಾಗಿ ಯದುವೀರ್ ಅವರ ಪರ ಮತ ಚಲಾಯಿಸಲು ಮುಂದೆ ಬರುತ್ತಿದ್ದಾರೆ. ಇದು ಅಭ್ಯರ್ಥಿ ಗೆಲುವಿಗೆ ಪೂರಕವಾಗಲಿದೆ ಎಂದರು.

ಮೈಸೂರಿಗೆ ರಾಜಮನೆತನ ನೀಡಿರುವ ಕೊಡುಗೆ ಅವಿಸ್ಮರಣೀಯ. ಕೆ.ಆರ್.ಆಸ್ಪತ್ರೆ, ಕೆಆರ್‌ಎಸ್ ಅಣೆಕಟ್ಟೆ, ಜಯಚಾಮರಾಜೇಂದ್ರ ಮೃಗಾಲಯ, ನಾಲೆಗಳ ನಿರ್ಮಾಣ….ಹೀಗೆ ಕೊಡುಗೆಗಳ ಮಹಾಪೂರವೇ ಇದೆ. ಇಲ್ಲಿನ ಜನರು ಒಂದಲ್ಲ ಒಂದು ರೀತಿಯಲ್ಲಿ ಇದರ ಪ್ರಯೋಜನ ಪಡೆಯುತ್ತಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಲಿದ್ದಾರೆ ಎಂದು ತಿಳಿಸಿದರು.

ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಹೀಗಾಗಿಯೇ ಇಲ್ಲಿ ಬಿಜೆಪಿ ಎರಡು ಬಾರಿ ಗೆಲುವು ಸಾಧಿಸಲು ಸಾಧ್ಯವಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ, ಸ್ವಚ್ಛ ಆಡಳಿತ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿನ ಅಭಿವೃದ್ಧಿ ಕಾರ್ಯ ಜನರ ಮನಸ್ಸಿನಲ್ಲಿದ್ದು ಇವೆಲ್ಲವೂ ಮತವಾಗಿ ಪರಿವರ್ತನೆಯಾಗಲಿದೆ ಎಂದರು.

ಶಾಸಕ ಜಿ.ಟಿ.ದೇವೇಗೌಡ, ನಗರಪಾಲಿಕೆ ಮಾಜಿ ಸದಸ್ಯೆ ಪ್ರೇಮಾ ಶಂಕರೇಗೌಡ, ಬಿಜೆಪಿ ನಗರ ಕಾರ್ಯದರ್ಶಿ ಪುನೀತ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net