

ಮೈಸೂರು: ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್‌ಗೆ ಮತ ಹಾಕಿದರೆ ತಾಲಿಬಾನಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದೆ. ಅದೀಗ ನಿಜವಾಗಿದ್ದು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಬಾಂಬ್ ಸ್ಫೋಟ ಕೇವಲ ಟ್ರೇಲರ್ ಅಷ್ಟೆ. ಮುಂದೆ ರಾಜ್ಯದಲ್ಲಿ ಇನ್ನೂ ದೊಡ್ಡ ದೊಡ್ಡ ಗಂಡಾಂತರಗಳು ಕಾದಿವೆ ಎಂದು ಸಂಸದ ಪ್ರತಾಪ ಸಿಂಹ ಕಳವಳ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಆವರಣದಲ್ಲೇ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಫೋಟಿಸಲಾಗಿದೆ. ಇದೆಲ್ಲವನ್ನೂ ಗಮನಿಸಿದರೆ ಯಾರು ಅಧಿಕಾರ ನಡೆಸುತ್ತಿದ್ದಾರೆ ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತದೆ. ಕಾಂಗ್ರೆಸ್ ಸರ್ಕಾರವೇ ಮುಂದುವರಿದರೆ ವಿಧಾನಸೌಧದ ಮೇಲೆ ಗುಂಬಜ್‌ಗಳು ಬರಲಿವೆ. ಮೇಲೆಯೇ ಮೈಕ್ ಇಟ್ಟು ಆಜಾನ್ ಕೂಗಿದರೂ ಆಶ್ಚರ್ಯಪಡಬೇಕಿಲ್ಲ ಎಂದು ವ್ಯಂಗ್ಯವಾಡಿದರು.
ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಹತ್ತು ವರ್ಷಗಳ ಅವಧಿಯಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿದ್ದವು. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸ್ಫೋಟಗಳು ಆರಂಭಗೊಂಡಿವೆ ಎಂದು ದೂರಿದರು.