ಪಾಂಡವಪುರದಲ್ಲಿ ಬೈಕ್ ಕಳ್ಳನ ಬಂಧನ

1-pnp 4c
ಪಾಂಡವಪುರ ಪೊಲೀಸರು ಕಳ್ಳನಿಂದ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
Published on

ಪಾಂಡವಪುರ: ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮನಿಂದ 5.20 ಲಕ್ಷ ರೂ. ಮೌಲ್ಯದ ವಿವಿಧ ಮಾದರಿಯ 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುವ ಪಾಂಡವಪುರ ಪೊಲೀಸರು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಸಾಗರ ನಿವಾಸಿ ರಾಜಾಚಾರಿ ಬಂಧಿತ ಆರೋಪಿ. ಈತ ಮಂಡ್ಯ, ಮೈಸೂರು ಸೇರಿದಂತೆ ವಿವಿಧೆಡೆ ಬೈಕ್‌ಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಮನೆ ಭೋಗ್ಯಕ್ಕೆ ಹಾಕಿಕೊಂಡು ಸಾಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದ ಈತನ ಚಲನವಲನಗಳ ಬಗ್ಗೆ ಸ್ಥಳೀಯರು ಅನುಮಾನಗೊಂಡು ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಠಾಣೆಗೆ ಕರೆಸಿ ವಿಚಾರಣೆಗೆ ಒಳಪಡಿಸಿದಾಗ ಈತ ಮಂಡ್ಯ, ಮೈಸೂರು ಜಿಲ್ಲೆಯ ವಿವಿಧೆಡೆ ಬೈಕ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಈತನಿಂದ ಸುಮಾರು 5.20 ಲಕ್ಷ ರೂ. ಮೌಲ್ಯದ ವಿವಿಧ ಮಾದರಿ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಶ್ರೀರಂಗಪಟ್ಟಣ ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಎಚ್.ಆರ್.ವಿವೇಕಾನಂದ, ಸಬ್ ಇನ್ಸ್ ಪೆಕ್ಟರ್‌ಗಳಾದ ಆರ್.ಬಿ.ಉಮೇಶ್, ಕೆ.ಸಿ.ಧರ್ಮಪಾಲ್, ಮುಖ್ಯ ಪೇದೆ ಗಿರೀಶ್, ವೆಂಕಟೇಶ್, ಸೋಮಶೇಖರ್, ಕೆ.ಟಿ.ರಾಜೇಶ್, ತೌಸಿಫ್, ಎನ್.ಶಿವರಾಜು, ವರದರಾಜು, ಎಂ.ಕೆ. ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಅಧಿಕಾರಿಗಳು, ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net