

ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆಯ ಕಾಲೇಜೊಂದರ ಹತ್ತಿರ ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡಿದ್ದ ಇಬ್ಬರನ್ನು ಉತ್ತರ ಸಂಚಾರ ಠಾಣೆ ಪೊಲೀಸರು ಬೈಕ್ ಸಹಿತ ವಶಕ್ಕೆ ಪಡೆದಿದ್ದಾರೆ.
ಹಳೇ ಹುಬ್ಬಳ್ಳಿ ಇಂದ್ರಪ್ರಸ್ತ ನಗರದ ಇಬ್ಬರನ್ನು ಬಂಧಿಸಲಾಗಿದೆ. ಬೈಕ್ ವ್ಹೀಲಿಂಗ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ಗಮನಿಸಿದ ಉತ್ತರ ಸಂಚಾರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.
ದೂರು, ಪ್ರತಿದೂರ: ವಾಹನ ಪಾರ್ಕ್ ಮಾಡುವ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿದ್ದು, ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಸೆಟ್ಲಮೆಂಟ್ ಶಾಂತಿಕೇತನ ಕಾಲನಿಯಲ್ಲಿ ನಡೆದಿದೆ.
ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರ ದಾಖಲಾಗಿವೆ. ಮನೆಯನ್ನು ಬಿಟ್ಟುಕೊಡುವುದು ಹಾಗೂ ದ್ವಿಚಕ್ರ ವಾಹನ ಪಾರ್ಕ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಆರಂಭವಾಗಿದ್ದು, ಕ್ರಿಕೆಟ್ ಬ್ಯಾಟ್ ಹಾಗೂ ಸ್ಟಿಕ್‌ಗಳಿಂದ ಹೊಡೆದಾಡಿಕೊಂಡಿದ್ದಾರೆ. ಜಗಳ ಬಿಡಿಸಲು ಬಂದ ಮಹಿಳೆಯ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.