

ನಂಜನಗೂಡು: ತಾಲೂಕಿನ ಕಳಲೆ ಗೇಟ್ ಬಳಿ ಶನಿವಾರ ಮಧ್ಯಾಹ್ನ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಬೈಕ್ ಸವಾರ ಸಾವಿಗೀಡಾಗಿದ್ದಾರೆ.
ನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮದ ಚಿನ್ನಸ್ವಾಮಪ್ಪ (55) ಮೃತರು. ಇದೇ ಗ್ರಾಮದ ರಾಮೇಗೌಡ (55) ಗಾಯಗೊಂಡಿದ್ದಾರೆ. ಹೆಮ್ಮರಗಾಲ ಗ್ರಾಮದಿಂದ ನಂಜನಗೂಡು ಮತ್ತು ಊಟಿ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಳಲೆ ಗ್ರಾಮಕ್ಕೆ ಕೆಲಸದ ನಿಮಿತ್ತ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್ ಸವಾರ ಚಿನ್ನಸ್ವಾಮಪ್ಪ ಸ್ಥಳದಲ್ಲಿಯೇ ಮೃತಪಟ್ಟರು. ಹಿಂಬದಿ ಸವಾರ ರಾಮೇಗೌಡಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಎಎಸ್‌ಪಿ ಮಲ್ಲಿಕ್, ಡಿವೈಎಸ್ಪಿ ರಘು, ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದರಾಜು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.