ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಿಸಿ ಆರೋಗ್ಯ ಇಲಾಖೆಯಿಂದ ಆದೇಶ

BMWM
Published on

ಬೆಂಗಳೂರು: ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆಗಾಗಿ ರಾಜ್ಯದ 31 ಜಿಲ್ಲೆಗಳಿಗೆ, ನೋಡಲ್ ಅಧಿಕಾರಿಗಳ ನಾಮನಿರ್ದೇಶನ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿಯಾಗಿರುವ ಕುಟುಂಬ ಕಲ್ಯಾಣ ಅಧಿಕಾರಿಗಳು ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಬಯೋಮೆಡಿಕಲ್ ತ್ಯಾಜ್ಯ ಘಟಕಗಳ ನಿರ್ವಹಣೆಯ ಮೇಲ್ವಿಚಾರಣೆ ಮಾಡಿ ಕಾಲಕಾಲಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಈ ನೋಡಲ್ ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿರುತ್ತದೆ.

ಈ ಅಧಿಕಾರಿಗಳು, ಬಯೋಮೆಡಿಕಲ್ ತ್ಯಾಜ್ಯ ಮಾನವನ ಆರೋಗ್ಯದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರದಂತೆ ಕಾನೂನು ರೀತಿಯಲ್ಲಿ ನಿರ್ವಹಣೆ ನಡೆಯುತ್ತಿದೆಯೇ ಎನ್ನುವುದನ್ನು ಪರಿಶೀಲಿಸಬೇಕು. ಬಯೋಮೆಡಿಕಲ್‌ಗೆ ಸಂಬಂಧಿಸಿದಂತೆ ವಾರ್ಷಿಕ ವರದಿಗಳು ಮತ್ತು ಅಪಘಾತಗಳ ವರದಿಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಸಕಾಲಿಕವಾಗಿ ಸಲ್ಲಿಕೆಯಾಗುವಂತೆ ನೋಡಿಕೊಳ್ಳಬೇಕು. ಬೇರ್ಪಡಿಸಿದ ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ಸಂಗ್ರಹಿಸಲು ಸುರಕ್ಷಿತ ಸ್ಥಳ ಇದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳಬೇಕು. ಸೂಕ್ತ ಸ್ಥಳ ನಿರ್ಮಾಣಕ್ಕೆ ಆಸ್ಪತ್ರೆಗಳಿಗೆ ಸೂಚಿಸುವಂತೆ ಆದೇಶದಲ್ಲಿ ತಿಳಿಸಿದೆ.

ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ರಿಜಿಸ್ಟರ್ ನಿರ್ವಹಣೆ ಮಾಡಬೇಕು. ತ್ಯಾಜ್ಯ ಸಂಗ್ರಹಣಾ ಏಜೆನ್ಸಿ ಅಥವಾ ಸಿಬಿಎಂಡಬ್ಲ್ಯುಟಿಎ್ನಿಂದ ಯಾವುದೇ ಲೋಪ ಕಂಡುಬಂದಲ್ಲಿ ಕೆಎಸ್‌ಪಿಸಿಬಿಗೆ ಮಾಹಿತಿ ನೀಡುವುದು ಸೇರಿ ಹಲವು ಸೂಚನೆಗಳನ್ನು ನೀಡಲಾಗಿದೆ. ಹೆಚ್ಚುವರಿಯಾಗಿ, ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆಯ ಮಹತ್ವದ ಬಗ್ಗೆ ಆರೋಗ್ಯ ಪೂರೈಕೆದಾರರು ಮತ್ತು ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net