

ಮಂಡ್ಯ: ಬಡವರು, ದೀನ ದಲಿತರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಅಸ್ತಿತ್ವಕ್ಕೆ ತಂದ ಜನೌಷಧ ಕೇಂದ್ರಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿರುವುದನ್ನು ಬಿಜೆಪಿ ಮಾಜಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್ ಖಂಡಿಸಿದ್ದಾರೆ.
ದೇಶಾದ್ಯಂತ ಯಶಸ್ವಿ ಹಾಗೂ ಮಾದರಿಯಾಗಿ ಹೊರಹೊಮ್ಮಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರ ಕಡಿಮೆ ವೆಚ್ಚದಲ್ಲಿ ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಔಷಧ ಒದಗಿಸುತ್ತಿವೆ. ಕರ್ನಾಟಕದಲ್ಲಿಯೂ ನೂರಾರು ಜನೌಷಧ ಕೇಂದ್ರ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ, ರಾಜ್ಯಸರ್ಕಾರ ಕುಂಟು ನೆಪ ಹೇಳಿ 200ಕ್ಕೂ ಹೆಚ್ಚು ಜನೌಷಧ ಕೇಂದ್ರ ಮುಚ್ಚಿಸುವ ಮೂಲಕ ಬಡವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯುಳ್ಳ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ಜನೌಷಧ ಕೇಂದ್ರದಲ್ಲಿ ಶೇ.70 ರಿಂದ 90ರಷ್ಟು ಕಡಿಮೆ ಬೆಲೆಯಲ್ಲಿ ಜೆನೆರಿಕ್ ಔಷಧ ದೊರಕುತ್ತಿವೆ. ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಅತ್ಯುತ್ತಮ ಔಷಧ ಒದಗಿಸುತ್ತಿರುವ ಕೇಂದ್ರಗಳನ್ನು ಮುಚ್ಚುವ ಅಗತ್ಯವೇನಿದೆ?. ರಾಜ್ಯ ಸರ್ಕಾರ ಕಾರ್ಪೊರೇಟ್ ಔಷಧ ಕಂಪನಿಗಳು ಮತ್ತು ಖಾಸಗಿ ಮೆಡಿಕಲ್ ಶಾಪ್‌ಗಳ ಲಾಬಿಗೆ ಮಣಿದು ಈ ನಿರ್ಧಾರ ಕೈಗೊಂಡಿದೆ. ಈ ಕೇಂದ್ರಗಳು ಬಡವರ ಪಾಲಿನ ವರದಾನವಾಗಿವೆ. ಆದರೆ ಬಡವರ ಆರೋಗ್ಯದಲ್ಲೂ ರಾಜಕೀಯ ಮಾಡುವ ಈ ಭ್ರಷ್ಟ ಕರ್ನಾಟಕ ಕಾಂಗ್ರೆಸ್‌ಕ್ಕೆ ಜನರೇ ಬುದ್ದಿ ಕಲಿಸುವ ದಿನ ದೂರವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಈ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.