

ಮಡಿಕೇರಿ: ಬಿಜೆಪಿ ಪರಿಶಿಷ್ಟರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಎಲ್ಲಾ ವರ್ಗದವರಿಗೆ ಸಮಾನ ಅವಕಾಶಗಳನ್ನು ನೀಡಿದ ಹೆಗ್ಗಳಿಕೆ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಲ್ಲುತ್ತದೆ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪರಿಶಿಷ್ಟರ ಬಹುಪಾಲು ಮತಗಳು ಕಾಂಗ್ರೆಸ್ ಪಾಲಾಗಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟರಿಗೆ ಕಾಂಗ್ರೆಸ್ ಸೂಕ್ತ ಸ್ಥಾನಮಾನ ಮತ್ತು ಸಮಾನ ಅವಕಾಶಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಯಶಸ್ವಿಯಾಗಿದೆ. ಆದರೆ ಬಿಜೆಪಿ ಪರಿಶಿಷ್ಟರಿಗಾಗಿ ನೀಡಿದ ಕೊಡುಗೆ ಏನು ಎನ್ನುವುದನ್ನು ಆ ಪಕ್ಷದ ಮುಖಂಡರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು.
ಬಿಜೆಪಿ ಸಂವಿಧಾನ ವಿರೋಧಿಯಾಗಿದೆ, ಬಡವರ ಪಾಲಿಗೆ ಇಲ್ಲದಂತಾಗಿದ್ದು, ಶ್ರೀಮಂತರ ಪರವಾಗಿದೆ. ಇದರ ನಡುವೆಯೇ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷರು ತಮ್ಮ ಪಕ್ಷದ ಪರ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ. ಪಕ್ಷದಲ್ಲಿ ಅವರ ಸ್ಥಾನಮಾನ ಏನು ಎಂಬುವುದನ್ನು ಎಸ್.ಸಿ ಮೋರ್ಚಾದ ಜಿಲ್ಲಾಧ್ಯಕ್ಷರು ಅರ್ಥಮಾಡಿಕೊಳ್ಳಬೇಕಾಗಿದೆ. ಕಾಂಗ್ರೆಸ್ ಎಚ್.ಬಿ.ಜಯಮ್ಮ, ರಾಜಮ್ಮ, ಪಾಪುಸಣ್ಣಯ್ಯ ಸೇರಿದಂತೆ ಹಲವರಿಗೆ ಉನ್ನತ ಸ್ಥಾನಮಾನಗಳನ್ನು ನೀಡಿ ರಾಜಕೀಯ ಮತ್ತು ಸಾಮಾಜಿಕವಾಗಿ ಬೆಳೆಸಿದೆ. ಆದರೆ ಬಿಜೆಪಿ ಪಕ್ಷ ಮೊಗೇರ ಸಮಾಜದ ಮುಖಂಡ ಹಾಗೂ ಜಿ.ಪಂ ಮಾಜಿ ಅಧ್ಯಕ್ಷ ಗೌತಮ್ ಶಿವಪ್ಪ ಸೇರಿದಂತೆ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಜೆ.ಎಲ್.ಜನಾರ್ಧನ್ ಮಾತನಾಡಿ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಲಭಿಸಿದೆೆ. ಜನಪರವಾದ ಐದು ಗ್ಯಾರಂಟಿಗಳಿಗೆ ಜನ ಬೆಂಬಲ ನೀಡುತ್ತಿರುವುದನ್ನು ಬಿಜೆಪಿ ಸಹಿಸುತ್ತಿಲ್ಲ. ಇದೇ ಕಾರಣಕ್ಕೆ ಜನರ ಹಾದಿ ತಪ್ಪಿಸುವುದಕ್ಕಾಗಿ ಬಿಜೆಪಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಆದರೆ ಈ ಬಾರಿ ಕೂಡ ದಲಿತರ ಹೆಚ್ಚು ಮತಗಳು ಕಾಂಗ್ರೆಸ್ ಪಾಲಾಗಲಿದ್ದು, ಎಂ.ಲಕ್ಷ್ಮಣ ಗೌಡ ಅವರು ಜಯಭೇರಿ ಬಾರಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಉಪಾಧ್ಯಕ್ಷ ಆರ್.ಪಿ.ಚಂದ್ರಶೇಖರ್, ಸಾಮಾಜಿಕ ಜಾಲತಾಣದ ಜಿಲ್ಲಾ ಉಪಾಧ್ಯಕ್ಷ ವಿ.ಸಂದೀಪ್ ಹಾಗೂ ಸೇವಾದಳದ ಸದಸ್ಯೆ ಪ್ರೇಮ ಕೃಷ್ಣಪ್ಪ ಉಪಸ್ಥಿತರಿದ್ದರು.