

ಬೆಳಗಾವಿ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮರೆತು ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದೆ. ಜನ ಸಾಮಾನ್ಯರಿಗೆ, ಮಹಿಳೆಯರಿಗೆ, ನೌಕರರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು. ನಗರದ ಬಿಜೆಪಿ ಗ್ರಾಮಾಂತರ ಜಿಲ್ಲೆ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಸ್ಥಗೀತಗೊಂಡಿವೆ. ಹೊಸ ಕಾಮಗಾರಿಗಳು ಆರಂಭಗೊಳ್ಳುತ್ತಿಲ್ಲ. ಆದರೆ, ಅಭಿವೃದ್ಧಿ ಹೆಸರಿನಲ್ಲಿ ಹಣ ಲೂಟಿ ಹೊಡೆಯುವ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಇಂತಹ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ವಿರುದ್ಧ ನಿರಂತರ ಹೋರಾಟಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳು ಒಗ್ಗಟ್ಟಿನಿಂದ ಮಾಡಬೇಕು.ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಪಕ್ಷ ಸಂಘಟನೆಗಾಗಿ ಕಾರ್ಯಕರ್ತರು ಸಂಕಲ್ಪ ಮಾಡಬೇಕು. ಜತೆಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆ ಮುಟ್ಟಿಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕು ಎಂದು ಹೇಳಿದರು. ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ಧ ಹೋರಾಡಲು ಕಾರ್ಯಕರ್ತರು ಸಜ್ಜಾಗಬೇಕು. ರಾಜ್ಯ ಸರ್ಕಾರದ ವೈಫಲ್ಯಗಳು ಕುರಿತು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು.ಗ್ರಾಮೀಣ ಭಾಗದಲ್ಲಿ ಪಕ್ಷ ಸಂಘಟನೆ ಬಲಿಷ್ಠಗೊಳಿಸಲು ಪ್ರತಿಯೊಬ್ಬರು ಸಂಕಲ್ಪ ಮಾಡಬೇಕು. ಮುಂಬರುವ ದಿನಗಳು ಪಕ್ಷಕ್ಕೆ ಮಹತ್ವವಾಗಿದೆ ಎಂದರು. ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ ಕಡಿ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ, ಮುರುಗೇಂದ್ರಗೌಡ ಪಾಟೀಲ್, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ ಕೊಲಕಾರ, ಜಿಲ್ಲಾ ಮಾಧ್ಯಮ ಸಹ ಪ್ರಮುಖ ಬಾಳೇಶ ಚವ್ವನ್ನವರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಈರಣ್ಣ ವಾರದ,ಸುನಿಲ್ ಮರಕುಂಬಿ, ಪ್ರಶಾಂತ ಅಮ್ಮಿನಭಾವಿ, ಮನೋಜ್ ಪಾಟೀಲ್, ಬಸವರಾಜ ನೇಸರಗಿ, ವಿಠ್ಠಲ್ ಸಾಯಣ್ಣವರ, ವೀರಭದ್ರ ಪೂಜಾರಿ ಇತರರಿದ್ದರು.