

ಹುಬ್ಬಳ್ಳಿ: ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ನೀರಿನಿಂದ ಹೊರ ಬಿದ್ದ ಮೀನಿನಂತೆ ಚಡಪಡಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಭ್ರಮೆಯಲ್ಲಿದ್ದಾರೆ. ಇದನ್ನೆಲ್ಲ ಬಿಟ್ಟು ಅವರು ಮೊದಲು ತಮ್ಮ ಮನೆಯನ್ನು ಸರಿಪಡಿಸಿಕೊಳ್ಳಲಿ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ. ಶೇ. 40 ಕಮಿಷನ್ ಸರ್ಕಾರ ಎಂಬ ಕಾರಣಕ್ಕೆ ಅವರು ಅಧಿಕಾರ ಕಳೆದುಕೊಂಡರು. ಬಿಜೆಪಿ ಅವರೇನು ಸತ್ಯ ಹರಿಶ್ಚಂದ್ರರಾ? ಚುನಾವಣೆಗೆ ಅವರಿಗೆ ದುಡ್ಡು ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು.
ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಅವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ರಾಜಕಾರಣದಲ್ಲಿ ಒಬ್ಬೊಬ್ಬರ ಅಭಿಪ್ರಾಯ ಒಂದೊಂದು ರೀತಿ ಇರುತ್ತದೆ. ಅವನ್ನೆಲ್ಲ ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷರು ನೋಡಿಕೊಳ್ಳುತ್ತಾರೆ. ಅವರನ್ನು ಕರೆದು ಮಾತನಾಡಿಸಿ ಸರಿ ಮಾಡುವ ಕೆಲಸ ಮಾಡುತ್ತಾರೆ ಎಂದರು.
ಬಿಜೆಪಿ ನನ್ನನ್ನು ಕಡೆಗಣಿಸಲು ಕಾರಣ ಏನೂ ಎಂಬುದಕ್ಕೆ ಶಾಸಕ ಬಸನಗೌಡ ಪಾಟೀಲ ಉತ್ತರ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಯಾರೇ ಅಧ್ಯಕ್ಷರು, ಪ್ರತಿಪಕ್ಷ ನಾಯಕರಾದರೂ ಸರಿಪಡಿಸಲಾಗದಷ್ಟು ಹಾಳಾಗಿದೆ. ಬಿಜೆಪಿಯನ್ನು ರಿಪೇರಿ ಮಾಡಲು ಸಾಧ್ಯವೇ ಇಲ್ಲ. ಅವರಿಗೆ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಆಗುತ್ತಿಲ್ಲ. ವಿಧಾನ ಪರಿಷತ್ನಲ್ಲಿ ಇದುವರೆಗೂ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ ಎಂದು ಟೀಕಿಸಿದರು.