

ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆದಿದ್ದು, ಇದರಿಂದ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರು. ಆ ಮೈತ್ರಿಯನ್ನು ಇದೀಗ ಮುಂದುವರೆಸಿದ್ದಾರೆ. ಅವರ ಮೈತ್ರಿಯು ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಅದೇ ರೀತಿ ಪೆನ್‌ಡ್ರೈವ್ ಪ್ರಕರಣ ಸಹ ಈ ಚುನಾವಣೆ ಪ್ರಭಾವ ಬೀರುವುದಿಲ್ಲ. ಏಕೆಂದರೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರು ಪ್ರಬುದ್ಧರಿದ್ದಾರೆ. ಯಾರು ಉತ್ತಮ ಕೆಲಸ ಮಾಡಿದ್ದಾರೆ ಎಂದು ತುಲನೆ ಮಾಡುವ ಶಕ್ತಿ ಅವರಿಗೆ ಇದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದೆ. ವಿಧಾನ ಪರಿಷತ್ ಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ. ಹಾಗಾಗಿ 6 ತಿಂಗಳ ಮಂಚೆಯೇ ಅಭ್ಯರ್ಥಿಗಳನ್ನು ಘೋಷಿಸಲಾಯಿತು. ಅಭ್ಯರ್ಥಿಗಳಿಗೆ ಪ್ರಚಾರ ಮಾಡಲು ಸಾಕಷ್ಟು ಸಮಯ ಸಿಕ್ಕಿದ್ದು, ಮತದಾರರನ್ನು ಭೇಟಿಯಾಗಿ ಮಾತುಕತೆ ನಡೆಸಲು ಸಮಯಾವಕಾಶ ಸಿಕ್ಕಿದ್ದು, ಹೀಗಾಗಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸ್ಟಾರ್ ಪ್ರಚಾರಕ್ಕರಾಗಿ ಆಗಮಿಸುವಂತೆ ಪಕ್ಷದ ಹೈಕಮಾಂಡ್ ನನಗೆ ಆಹ್ವಾನ ನೀಡಿದೆ. ಆದರೆ, ವೈಯಕ್ತಿಕವಾಗಿ ನನಗೆ ಹೋಗಲು ಇಷ್ಟವಿಲ್ಲ, ರಾಜ್ಯದಲ್ಲಿ ಸಾಕಷ್ಟು ಕೆಲಸ ಇರುವ ಹಿನ್ನೆಲೆಯಲ್ಲಿ ಹೊರ ರಾಜ್ಯದ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ. ಸಾಮಾನ್ಯವಾಗಿ ನಾನು ಹೊರ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ ಎಂದರು.
ಭ್ರಷ್ಟಾಚಾರದ ಪೆನ್‌ಡ್ರೈವ್ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಲು ಸಿದ್ದರಾಮಯ್ಯ ಆಸಕ್ತಿ ತೋರಲಿಲ್ಲ ‘ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಕೇಸ್, ಹಾಗಾಗಿ ಅವರ ಬಗ್ಗೆ ಮಾತನಾಡಲು ಬಯಸುವುದಿಲ್ಲ’ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಪಥವಾಗುತ್ತದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಸಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಒಂದು ವರ್ಷದಿಂದ ರಾಜ್ಯ ಸರ್ಕಾರ ಪಥನ ಆಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಸದ್ಯ ಅವರ ಸರ್ಕಾರ ಉಳಿಸಿಕೊಂಡರೆ ಸಾಕಾಗಿದೆ ಅವರಿಗೆ. ನಮ್ಮ ಸರ್ಕಾರ ಬಗ್ಗೆ ಮಾತನಾಡುವ ಬದಲು ಅವರು ಅವರ ಸರ್ಕಾರವನ್ನು ಉಳಿಸಿಕೊಳ್ಳುವ ಕಡೆಗೆ ಗಮನ ಹರಿಸಲಿ ಎಂದು ತಿರುಗೇಟು ನೀಡಿದರು.
ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ರೀತಿಯ ಒಳಜಗಳ ಇಲ್ಲ. ಒಂದುವೇಳೆ ಒಳಜಗಳ ಇದ್ದಿದ್ದರೆ ನಾವು ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಿನಿಂದ ಎದಿರಲು ಸಾಧ್ಯವಾಗುತಿತ್ತೇ ಎಂದು ಪ್ರಶ್ನಿಸಿದರು