

ವಿಜಯವಾಣಿ ಸುದ್ದಿಜಾಲ ಉಡುಪಿ
ಒಳ್ಳೆಯದಿರಲಿ ಅಥವಾ ಕೆಟ್ಟದ್ದೇ ಇರಲಿ ಅದನ್ನು ವೈಭವೀಕರಿಸುವುದು ಬಿಜೆಪಿಯ ವಿಶೇಷತೆ. 2017ರಲ್ಲಿ ಜಿಎಸ್ಟಿ ಜಾರಿಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರ ಇತ್ತೀಚೆಗೆ ಸ್ಲ್ಯಾಬ್ ಇಳಿಕೆ ಮಾಡಿ ಅದನ್ನೂ ವೈಭವೀಕರಿಸುತ್ತಲೇ ಇದೆ. ಕಳೆದ 8 ವರ್ಷಗಳ ಕಾಲ ಜಿಎಸ್ಟಿ ಮೂಲಕ ಜನರ ಹಣ ಕೊಳ್ಳೆ ಹೊಡೆದಿರುವುದು ಸುದ್ದಿಯೂ ಆಗಲಿಲ್ಲ, ವೈಭವೀಕರಣವೂ ಇರಲಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಆರೋಪಿಸಿದರು.
ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ (ಅ.18) ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಹಣ ಲೂಟಿ ಮಾಡುತ್ತಿರುವುದು ಜನರಿಗೆ ತಿಳಿಯುತ್ತಿದ್ದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜಿಎಸ್ಟಿ ಸ್ಲ್ಯಾಬ್ 2ಕ್ಕೆ ಇಳಿಕೆ ಮಾಡಿದ್ದಾರೆ ಎಂದು ಟೀಕಿಸಿದರು.
ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಎಂಎಲ್ಸಿ ಮಂಜುನಾಥ ಭಂಡಾರಿ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಪಕ್ಷದ ಪ್ರಮುಖರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುನಿಯಾಲು ಉದಯಕುಮಾರ್ ಶೆಟ್ಟಿ, ಪ್ರಸಾದರಾಜ್ ಕಾಂಚನ್, ರಾಜ್ಯ ಮಹಿಳಾ ಕಾರ್ಯದರ್ಶಿ ಗೀತಾ ವಾಗ್ಳೆ, ಮಲ್ಯಾಡಿ ಶಿವರಾಂ ಶೆಟ್ಟಿ, ಮೀನಾಕ್ಷಿ ಮಾಧವ ಹಾಗೂ ಪಕ್ಷದ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ಸ್ವಾಗತಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ವಂದಿಸಿದರು. ಕಾಂಗ್ರೆಸ್ ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು.