

ಮಂಗಳೂರು : ವಿವಿಧ ಚುನಾವಣೆಗಳಲ್ಲಿ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಪಕ್ಷ ಸಂಘಟಿಸಿದ ಅನುಭವವಿರುವ ಕಿಶೋರ್‌ಕುಮಾರ್ ಅವರನ್ನು ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿಯು ಪಕ್ಷ ಸಂಘಟನೆಯನ್ನು ಗೌರವಿಸುವ ನಿಟ್ಟಿನಲ್ಲಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಇದು ಕಾರ್ಯಕರ್ತರಿಗೆ ಹೆಮ್ಮೆಯ ವಿಚಾರವಾಗಿದೆ. ಅವರನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ನಡೆದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ
ವ್ಯಾಪ್ತಿಯ ಸಂಬಂಧಪಟ್ಟ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಮಾಜಿ ಎಂಎಲ್‌ಸಿ ಕ್ಯಾ.ಗಣೇಶ್ ಕಾರ್ಣಿಕ್ ಮಾತನಾಡಿ, ಪಕ್ಷದ ಅನೇಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಕಿಶೋರ್ ಕುಮಾರ್ ಅವರು ಜನಸೇವೆಯಲ್ಲಿಯೂ ಅದೇ ಬದ್ಧತೆ ಪ್ರದರ್ಶಿಸುತ್ತಾರೆ. ವಿಧಾನ ಪರಿಷತ್‌ನಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಧ್ವನಿಯಾಗುತ್ತಾರೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿಕೊಳ್ಳುವ ವಾತಾವರಣ ನಿರ್ಮಾಣ ವಾಗಿದ್ದು ಕಿಶೋರ್ ಕುಮಾರ್ ಅವರ ಗೆಲುವು ನಿಶ್ಚಿತವಾಗಿದೆ ಎಂದರು.
ಅಭ್ಯರ್ಥಿ ಕಿಶೋರ್ ಕುಮಾರ್, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ‌್ವಾರ, ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಚು, ಉಪ ಮೇಯರ್ ಭಾನುಮತಿ ಉಪಸ್ಥಿತರಿದ್ದರು.