ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿಗೆ ಬಿಜೆಪಿ ವಿರೋಧ

mng-mar22-protest
Published on

ಮಂಗಳೂರು: ಮುಸ್ಲಿಂ ಗುತ್ತಿಗೆದಾರರಿಗೆ ಶೇ. 4 ಮೀಸಲಾತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಮಿನಿ ವಿಧಾನಸೌಧ ಮುಂಭಾಗ ಶನಿವಾರ ಪ್ರತಿಭಟನೆ ನಡೆಯಿತು.

ಚಿತ್ರದುರ್ಗ ಸಂಸದ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ದುರಾಡಳಿತ, ಸ್ವಜನ ಪಕ್ಷಪಾತ, ಲೈಂಗಿಕ ಹಗರಣದಲ್ಲಿ ಮುಳುಗಿರುವ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ನೀಡುವ ಮೂಲಕ ದಲಿತರಿಗೆ ಹಾಗೂ ಹಿಂದುಳಿದ ವರ್ಗಗಳಿಗೆ ಅನ್ಯಾಯ ಎಸಗುತ್ತಿದೆ ಎಂದು ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡಿ, ಮುಸ್ಲಿಂ ಓಲೈಕೆ ನೀತಿಯ ಭಾಗವಾಗಿ ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ನೀಡುವ ನೀಚ ಮತ್ತು ಕೀಳುಮಟ್ಟದ ನಿರ್ಧಾರ ರಾಜ್ಯದ ಜನತೆಗೆ ಎಸಗಿದ ದ್ರೋಹವಾಗಿದೆ. ಸಂವಿಧಾನ ಉಳಿಸಿ ಎಂದು ಹೇಳುತ್ತಿರುವ ಕಾಂಗ್ರೆಸಿಗರೇ ಈಗ ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಆ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಕಾರಣರಾಗಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯ ಕಿಶೋರ್‌ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮುಖಂಡರಾದ ರವಿಶಂಕರ ಮಿಜಾರ್, ನಿತಿನ್‌ಕುಮಾರ್, ಆರ್.ಸಿ. ನಾರಾಯಣ್, ಸುಲೋಚನಾ ಭಟ್, ಶಿಲ್ಪಾ ಸುವರ್ಣ, ಮಾಜಿ ಮೇಯರ್‌ಗಳಾದ ಸುಧೀರ್ ಶೆಟ್ಟಿ, ಜಯಾನಂದ ಅಂಚನ್, ಮನೋಜ್‌ಕುಮಾರ್ ಭಾಗವಹಿಸಿದ್ದರು.

ಪ್ರತಿಭಟನೆ ಬಳಿಕ ಬಿಜೆಪಿ ಕಾರ್ಯಕರ್ತರು ಕೆಲಕಾಲ ರಸ್ತೆ ತಡೆ ನಡೆಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net