

ನಂಜನಗೂಡು : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ತಿರುಚಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು.
ಪಟ್ಟಣದ ಆರ್.ಪಿ. ರಸ್ತೆಯಲ್ಲಿರುವ ಬಿಜೆಪಿ ಕಚೇರಿ ಬಳಿ ಗುರುವಾರ ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ತಿರುಚಿ ಸಾಮಾಜಿಕ ಮಾಧ್ಯಮಗಳ ಮೂಲಕ ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಸಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಸಾಮ್ರಾಟ್ ಸುಂದರೇಶನ್ ಆರೋಪಿಸಿದರು.
ಡಾ.ಬಿ.ಆರ್.ಅಂಬೇಡ್ಕ್ ಅವರ ಗೌರವಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಪಂಚತೀರ್ಥವನ್ನು ಅಭಿವೃದ್ಧಿಪಡಿಸಿ ಸಂವಿಧಾನ ಪುಸ್ತಕವನ್ನು ಆನೆ ಮೇಲೆ ಮೆರವಣಿಗೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯನ್ನು ತಿರುಚಿ ಅವರ ಮೇಲೆ ಸುಳ್ಳು ಪ್ರಚಾರ ಮಾಡುವ ಮೂಲಕ ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಸುತ್ತಿರುವ ಕಾಂಗ್ರೆಸ್ ಪಕ್ಷದ ವರಿಷ್ಠರು ರಾಷ್ಟ್ರದ ಜನರಲ್ಲಿ ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ನಗರಾಧ್ಯಕ್ಷ ಸಿದ್ದರಾಜು ಮಾತನಾಡಿ, ಲೋಕಸಭೆಯಲ್ಲಿ ಗೊಂದಲ ಸೃಷ್ಟಿಸಿ ಬಿಜೆಪಿ ಸಂಸದರ ಮೇಲೆ ಕಾಂಗ್ರೆಸ್ ಮುಖಂಡರು ಹಲ್ಲೆ ನಡೆಸಿರುವುದು ಖಂಡನೀಯ ಎಂದು ಹೇಳಿದರು. ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಸಿದ್ದರಾಜು, ತಾಲೂಕು ನಗರ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ನಗರ ಎಸ್‌ಸಿ ಮೋರ್ಚಾ ಅಧ್ಯಕ್ಷ ಜಯರಾಮು, ಯುವ ಮೋರ್ಚಾ ಪದಾಧಿಕಾರಿಗಳಾದ ಮನೋಜ್, ಹೇಮಂತ್, ಸಚಿನ್, ಶ್ರೇಯಸ್ ಇದ್ದರು.