

ಕಾರವಾರ: ಭ್ರಷ್ಟಾಚಾರ ರಹಿತ ಆಡಳಿತ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ 140 ಕೋಟಿ ಜನರನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂಕಲ್ಪದಿಂದ ಸಾಧನೆಯವರೆಗೆ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವದ ಯಾವುದೇ ರಾಷ್ಟ್ರಗಳಲ್ಲಿ ನಿಂತು ಹೆಮ್ಮೆಯಿಂದ ನಾವು ಭಾರತೀಯರು ಎಂದು ಹೇಳಿಕೊಳ್ಳುವ ವಾತಾವರಣ ನಿರ್ಮಾಣವಾಗಿದೆ. ಭಾರತವನ್ನು ವಿಶ್ವಗುರು ಮಾಡುವಲ್ಲಿ ಪ್ರಧಾನಿ ಮೋದಿ ಅವರು ನಿರಂತರ ಶ್ರಮಿಸುತ್ತಿರುವುದು ಇದಕ್ಕೆ ಕಾರಣ. ಅವರು ಆಹಾರ, ಆರೋಗ್ಯ, ಮಹಿಳೆಯರ ಸಬಲೀಕರಣ, ಶಿಕ್ಷಣ, ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷತೆ ರೂಪಾಲಿ ನಾಯ್ಕ, ಪಕ್ಷ ಸಂಘಟನೆಯಲ್ಲಿ ನಿರಂತರ ಕಾರ್ಯಚಟುವಟಿಕೆ ಇರುವುದು ಬಿಜೆಪಿಯಲ್ಲಿ ಮಾತ್ರ. ಹಾಗೂ ಪಕ್ಷದಲ್ಲಿ ಕಾರ್ಯಕರ್ತರಿಗೆ ಗೌರವ ಇರುವುದು ಕೇವಲ ಬಿಜೆಪಿ ಯಲ್ಲಿ ಮಾತ್ರ ನೋಡಲು ಸಾಧ್ಯ. ಒಂದೆಡೆ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಅವರು ಜನಪರ ಯೋಜನೆಗಳನ್ನು ನೀಡುತ್ತಿದ್ದಾರೆ ಆದರೆ, ಬಡ ಜನತೆಗೆ ನೀಡಿದ ಈ ಕಾರ್ಯಕ್ರಮಗಳನ್ನು, ಇಲ್ಲಿನ ರಾಜ್ಯ ಸರ್ಕಾರ ತಡೆ ಹಿಡಿಯುತ್ತಿದೆ. ಜನೌಷ ಅಂಗಡಿಗಳನ್ನ ಮುಚ್ಚುವ ಹುನ್ನಾರ ನಡೆಸಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅವರು ``ವಿಕಸಿತ ಭಾರತ ಸಂಕಲ್ಪ ಪತ್ರ" ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಮಾಜಿ ಶಾಸಕ ಸುನಿಲ್ ಹೆಗಡೆ ಮಾತನಾಡಿ, ದೇಶದ ಆಡಳಿತ ವ್ಯವಸ್ಥೆಯಲ್ಲಿ ಅಭಿವೃದ್ಧಿಯ ವೇಗದಲ್ಲಿ 11 ವರ್ಷದ ಹಿಂದಿನ ಪರಿಸ್ಥಿತಿಗೂ ಈಗಲೂ ಅಜಗಜಾಂತರ ವ್ಯತ್ಯಾಸ ಕಾಣುತ್ತೇವೆ. ಪ್ರತಿ ಯೋಜನೆಯೂ ನೇರ ನಗದಿನ ಮೂಲಕ ಕೊನೆಯ ಫಲಾನುಭವಿಗೆ ತಲುಪುವಲ್ಲಿ ಕೇಂದ್ರ ಸರ್ಕಾರ ಕ್ರಮ ವಹಿಸಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಮಾತನಾಡಿ, ಕೇಂದ್ರ ಸರ್ಕಾರದ 11 ವರ್ಷಗಳ ಸಾಧನೆಯನ್ನು ಜನರಿಗೆ ಮುಟ್ಟಿಸಲು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಕಾಗೇರಿ ಅವರು ಸಂಸದರಾಗಿ ಅಽಕಾರ ವಹಿಸಿಕೊಂಡು ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಅವರನ್ನು ಗೌರವಿಸಲಾಯಿತು.
ಬಿಜೆಪಿ ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ, ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಮಾಜಿ ಜಿಲ್ಲಾಧ್ಯಕ್ಷ ಎಂ.ಜಿ ನಾಯ್ಕ, ಜಿಲ್ಲಾ ಉಪಾಧ್ಯಕ್ಷರಾದ ಆರತಿ ಗೌಡ, ಅಶೋಕ ಚಲವಾದಿ, ಸುಬ್ರಾಯ ವಾಳ್ಕೆ, ಸಂಜಯ ಸಾಳುಂಕೆ,ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈಶ್ವರ ನಾಯ್ಕ, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕರಾದ ಎಂ. ಜಿ.ಭಟ್, ಕಾರವಾರ ನಗರ ಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್ ವೇದಿಕೆಯಲ್ಲಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸಾನಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ ಅವರು ವಂದಿಸಿದರು.
........