

ಮಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಶುಕ್ರವಾರ ದ.ಕ ಜಿಲ್ಲಾ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ‘ ರಣಹೇಡಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಪ್ರತಿಭಟನಾ ಸ್ವಾತಂತ್ರೃವನ್ನು ಹತ್ತಿಕ್ಕಿದೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸರ್ವಾಧಿಕಾರ ಧೋರಣೆಯ ಮೂಲಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ. ಸಿದ್ದರಾಮಯ್ಯನವರು ಬಿಜೆಪಿಯ ಪ್ರತಿಭಟನೆಯನ್ನು ಹತ್ತಿಕ್ಕಬಹುದು ಆದರೆ ಹಗರಣದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ಮಾಜಿ ಎಂಎಲ್‌ಸಿ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ , ರವೀಂದ್ರ ಶೆಟ್ಟಿ ಉಳಿದೊಟ್ಟು, ಯತೀಶ್ ಆರ್ವಾರ, ಆರ್.ಸಿ.ನಾರಾಯಣ, ತಿಲಕ್‌ರಾಜ್ ಕೃಷ್ಣಾಪುರ ಮುಂತಾದವರು ಉಪಸ್ಥಿತರಿದ್ದರು.