ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

12Kush03
ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಶಾಲನಗರದಲ್ಲಿ ಮಂಗಳವಾರ ಬಿಜೆಪಿ ಸೋಮವಾರಪೇಟೆ ಮಂಡಲ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿದರು. ಭಾರತೀಶ್, ಕುಮಾರಪ್ಪ, ಎಂ.ವಿ.ನಾರಾಯಣ, ಜಿ.ಎಲ್.ನಾಗರಾಜು ಇತರರು ಇದ್ದರು.
Published on

ಕುಶಾಲನಗರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರಪೇಟೆ ಮಂಡಲ ವತಿಯಿಂದ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಮಾಜಿ ಶಾಸಕ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಮುಖಂಡರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಅಪ್ಪಚ್ಚು ರಂಜನ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ನೂರು ದಿನಗಳು ಕಳೆದರೂ ಅಭಿವೃದ್ಧಿ ಮಾತ್ರ ಶೂನ್ಯ. ರಸ್ತೆಯ ಒಂದು ಗುಂಡಿಯನ್ನೂ ಮುಚ್ಚುವ ಕೆಲಸ ಮಾಡಲಿಲ್ಲ. ಅನಿಯಮಿತ ಲೋಡ್ ಶೆಡ್ಡಿಂಗ್ ಪರಿಣಾಮ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದೆ. ಬರಗಾಲಕ್ಕೆ ತುತ್ತಾಗಿರುವ ರೈತರು ಈಗಾಗಲೇ ಶೇ. 80 ರಷ್ಟು ಬೆಳೆಗಳನ್ನು ಬಿತ್ತನೆ ಮಾಡಿದ್ದು, ಅವುಗಳನ್ನು ರಕ್ಷಿಸಿಕೊಳ್ಳಲು ವಿದ್ಯುತ್ ಸಮಸ್ಯೆ ಉಂಟಾಗಿ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಲವಾರು ರೈತಪರ ಯೋಜನೆಗಳಾದ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಭೂ ಸಿರಿ, ಶ್ರಮಶಕ್ತಿ, ರೈತ ಸಂಪದ, ಎಪಿಎಂಸಿ ಕಾನೂನು, ಕೃಷಿ ಭೂಮಿ ಮಾರಾಟ ಕಾನೂನು, ಜಿಲ್ಲೆಗೊಂದು ಗೋಶಾಲೆ ಇನ್ನೂ ಅನೇಕ ಯೋಜನೆಗಳನ್ನು ರದ್ದು ಮಾಡುವ ಮೂಲಕ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿದರು. ಬಿಜೆಪಿ ಸ್ಥಳೀಯ ಪ್ರಮುಖರಾದ ಎಂ.ಡಿ.ಕೃಷ್ಣಪ್ಪ, ಉಮಾಶಂಕರ್, ಡೈಮಂಡ್ ಮಣಿ, ಕೆ.ಜಿ.ಮನು, ಜಯವರ್ಧನ್, ನವನೀತ್, ಚರಣ್, ಜಿ.ಎಲ್.ನಾಗರಾಜ್, ಭಾಸ್ಕರ್ ನಾಯಕ್, ವರದ, ಶಿವಾಜಿ, ಗಣಪತಿ, ಬೋಸ್ ಮೊಣ್ಣಪ್ಪ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net