ರಾಜ್ಯ ಸರ್ಕಾರದ ನಿಲುವಿಗೆ ವಿರೋಧ

protest
Published on

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ರಾಜ್ಯ ವಿಧಾನಸಭೆಯಲ್ಲಿ18 ಶಾಸಕರನ್ನು ಅಮಾನತು ಮಾಡಿದ ಕಾಂಗ್ರೆಸ್ ನಿಲುವುಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ನೇತೃತ್ವದಲ್ಲಿ ಸೋಮವಾರ ದೇವನಹಳ್ಳಿಯ ಜಿಲ್ಲಾಡಳಿತಭವನದ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ಕಲ್ಪಿಸುವ ಸರ್ಕಾರದ ಕ್ರಮ ಮತ್ತು ಮೀಸಲಾತಿ ನೀಡುವ ಮಸೂದೆ ಯಾವುದೇ ಚರ್ಚೆ ಇಲ್ಲದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿರುವುದು ಖಂಡನೀಯ, ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರ ನೀತಿ ಸರಿಯಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡುವೆಯಲ್ಲಿ ಮಸೂದೆ ಅಂಗೀಕಾರ ಸಮಂಜಸವಲ್ಲ, ಈ ಮಸೂದೆ ಅಸಂವಿಧಾನಿಕವಾದದ್ದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಿರೋಧ ವ್ಯಕ್ತಪಡಿಸಿದರು. ಪ್ರತಿಪಕ್ಷ ಸದಸ್ಯರ ಪ್ರತಿಭಟನೆ, ವಿರೋಧ, ಗದ್ದಲದ ನಡುವೆ ಮುಸ್ಲಿಮರಿಗೆ 2 ಕೋಟಿ ರೂ. ವರೆಗಿನ ಸರ್ಕಾರಿ ಗುತ್ತಿಗೆ ಕಾಮಗಾರಿಗಳು ಹಾಗೂ 1 ಕೋಟಿರೂ. ವರೆಗೆ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್‌ನಲ್ಲಿ ಮೀಸಲಾತಿ ಕಲ್ಪಿಸುವ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಹಾಗಾಗಿ

ಇದನ್ನು ಹಿಂದಕ್ಕೆ ಪಡೆಯುವವರೆಗೂ ಪ್ರಶ್ನಿಸುವುದು ಸೇರಿ ಎಲ್ಲ ಹಂತಗಳಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಹಳೇ ಚಾಳಿ ಮುಂದುವರೆಸಿದೆ:

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ ರವಿಕುಮಾರ್ ಮಾತನಾಡಿ, ಕಾಂಗ್ರೆಸ್ ಮತ್ತೊಮ್ಮೆ ತನ್ನ ಹಳೇ ಚಾಳಿ ಮುಂದುವರೆಸಿದೆ. ಸರಕಾರಿ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿನೀಡುವುದು, ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ ನೀಡುವ ಸಹಾಯಧನವನ್ನು 20 ಲಕ್ಷ ರೂಗಳಿಂದ 30 ಲಕ್ಷ ರೂಗಳಿಗೆ ಹೆಚ್ಚಳ ಮಾಡಿರುವುದು, ಶಾದಿ ಭಾಗ್ಯಕ್ಕೆ ಹಣ ನೀಡುವ ನಿರ್ಧಾರ ತೆಗೆದುಕೊಂಡಿರುವುದು ಮತ್ತು ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾತ್ರ ಆತ್ಮರಕ್ಷಣೆಗಾಗಿ ವಿಶೇಷ ಅನುದಾನ ನೀಡುವುದು, ಕಾಂಗ್ರೆಸ್‌ನ ಮತ ಓಲೈಕೆಯ ರಾಜಕಾರಣದ ಮುಂದುವರೆದ ಭಾಗ ವಾಗಿದೆ. ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಬಿಜೆಪಿತೀವ್ರವಾಗಿ ವಿರೋಧಿಸಲಿದೆ ಎಂದರು.

ಬೆಲೆ ಏರಿಕೆ ಬಿಸಿ: ಬಿಜೆಪಿ ತಾಲೂಕು ಅಧ್ಯಕ್ಷ ಅಂಬರೀಶ್‌ಗೌಡ ಮಾತನಾಡಿ ಸಾಮಾನ್ಯ ಜನರ ಬದುಕಿಗೆ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ, ರೈತರು ತಮ್ಮ ಜಮೀನಿಗೆ ಟ್ರಾನ್ಸ್‌ಫಾರ್ಮರ್ ಆಳವಡಿಸಿಕೊಳ್ಳುವ ವೆಚ್ಚವನ್ನು 2 ಲಕ್ಷಕ್ಕೆ ಏರಿಸಿದೆ. ಹಾಲಿನ ದರ ಏರಿಕೆ, ವಿದ್ಯುತ್ ದರ ಏರಿಕೆ, ಬಸ್ ಪ್ರಯಾಣ ದರ ಏರಿಕೆ, ಮದ್ಯದ ದರ ಏರಿಕೆ ಮಾಡಿದೆ ಎಂದು ದೂರಿದರು. ದಿನೇದಿನೇ ಹೊಸ ಹೊಸ ತೆರಿಗೆಗಳನ್ನು ವಿಧಿಸಲಾಗುತ್ತಿದೆ. ಇದೆಲ್ಲದರ ಪರಿಣಾಮವಾಗಿ ಜನರ ಬದುಕು ಸಾಗಿಸಲು ಕಷ್ಟವಾಗಿದೆ. ಕೂಡಲೇ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆಯನ್ನು ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಅಗ್ರಹಿಸುತ್ತದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net