ಕೃಷಿ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ: ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

2
Published on

ಮಂಡ್ಯ: ಕೃಷಿ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವ ಸಚಿವ ಎನ್.ಚಲುವರಾಯಸ್ವಾಮಿ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಶುಕ್ರವಾರದಿಂದ ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಪ್ರತಿ ತಾಲೂಕಿನ ಕೃಷಿ ಅಧಿಕಾರಿಗಳಿಂದ 6 ರಿಂದ 8 ಲಕ್ಷ ರೂ ಲಂಚದ ಹಣವನ್ನು ಸಂಗ್ರಹ ಮಾಡಲು ಸೂಚಿಸಿದ್ದರ ವಿರುದ್ಧ ರಾಜ್ಯಪಾಲರಿಗೆ ಅಧಿಕಾರಿಗಳು ಪತ್ರ ಬರೆದು ನಮ್ಮ ಕುಟುಂಬ ಸಮೇತ ವಿಷ ಕುಡಿಯುತ್ತೇವೆ ಎಂದು ವಿವರಿಸಿದ್ದಾರೆ. ರಾಜ್ಯ ಸರ್ಕಾರದ ಇತಿಹಾಸದಲ್ಲೇ ಅಧಿಕಾರಿಗಳು ಸಚಿವರ ವಿರುದ್ಧ ಪತ್ರ ಬರೆದಿರುವುದು ಲಜ್ಜೆಗೇಡಿತನದ ಸಂಗತಿ. ಕೂಡಲೇ ಸಚಿವರು ತನಿಖೆ ಮುಗಿದು, ಆರೋಪ ಮುಕ್ತರಾಗುವವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಗುತ್ತಿಗೆದಾರರನೊಬ್ಬ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಅಂದು ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಿದ್ದರು. ಓರ್ವ ಮಂತ್ರಿಯಾಗಿರುವ ಕಾರಣ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ತಕ್ಷಣ ಚಲುವರಾಯಸ್ವಾಮಿ ಅವರು ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡುವವರೆಗೂ ಧರಣಿ ಸತ್ಯಾಗ್ರಹ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು. ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿವಿಲ್ ಕಾಮಗಾರಿಗಳನ್ನು ಮಾಡಿರುವ ಗುತ್ತಿಗೆದಾರರಿಂದ ಕಮಿಷನ್ ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಪ್ರಚಾರವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಸಾಕ್ಷಿಗಳು ಇಲ್ಲದಿದ್ದರೂ ಶೇ. 40 ಪರ್ಸೆಂಟ್ ಸರ್ಕಾರ ಎಂದು ಸುಳ್ಳು ಆರೋಪ ಮಾಡಿದ ಕಾಂಗ್ರೆಸ್ ಪಕ್ಷ ಇಂದು ಅವರದ್ದೇ ಪಕ್ಷದ ಉಪ ಮುಖ್ಯಮಂತ್ರಿಗಳಿಂದ ಲಂಚದ ಬೇಡಿಕೆ ಬಂದಿದ್ದು, ಕರ್ನಾಟಕದಲ್ಲಿ ಮನೆ ಮಾತಾಗಿದೆ. ಈ ಬಗ್ಗೆ ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಯುವ ಮುಖಂಡ ಚೇತನ್ ಶಿವರಾಮೇಗೌಡ, ಪ.ನಾ. ಸುರೇಶ್, ಮುಖಂಡರಾದ ಮದ್ದೂರು ಸತೀಶ್, ಕಾಂತರಾಜು, ಸಿ.ಟಿ. ಮಂಜುನಾಥ್, ನಿತ್ಯಾನಂದ, ವಿವೇಕ್, ಶಶಿಕುಮಾರ್, ಧರಣಿ, ಪ್ರಸನ್ನ, ಚಂದ್ರು, ಶಿವಕುಮಾರ ಆರಾಧ್ಯ, ಸಿದ್ದರಾಜೇಗೌಡ, ಶಿವಲಿಂಗಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net