ತಮಿಳುನಾಡಿಗೆ ನೀರು ಬಿಟ್ಟಿದ್ದಕ್ಕೆ ಆಕ್ರೋಶ: ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ

1
Published on

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ನಿಲುವು ಖಂಡಿಸಿ ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿದರು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸುಮಾರು ಒಂದೂವರೆ ಗಂಟೆ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಕಿವಿ ಮೇಲೆ ಹೂವು ಇಟ್ಟುಕೊಂಡು, ಹುರುಳಿ ಕಾಳು ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾತ್ರವಲ್ಲದೆ ವಾಹನ ಸಂಚಾರ ತಡೆದು ವೃತ್ತದಲ್ಲಿ ಬೆಂಕಿ ಹಾಕಿದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಕಾವೇರಿ ಕೊಳ್ಳದ ಪ್ರದೇಶದ ರೈತರಿಗೆ ನೀರು ಕೊಡದೆ ಜಮೀನು ಒಣಗಿಸಿ ಹುರುಳಿ ಚೆಲ್ಲಿಸಲು ಮುಂದಾಗಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಣತಿಯಂತೆ ಸುಪ್ರೀಂ ಕೋರ್ಟ್, ತಮಿಳುನಾಡು ಸರ್ಕಾರ ಮತ್ತು ನದಿ ಪ್ರಾಧಿಕಾರ ಮೆಚ್ಚಿಸಲು ಕಾವೇರಿಕೊಳ್ಳದ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿ ರಾಜ್ಯದ ರೈತರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ. ಕೆಆರ್‌ಎಸ್‌ನಲ್ಲಿ 113 ಅಡಿ ಇದ್ದ ನೀರು ಇದೀಗ 105 ಅಡಿಗೆ ಕುಸಿದಿದೆ, ಇದುವರೆಗೆ ಒಂದು ವಾರದಲ್ಲಿ 10 ಟಿಎಂಸಿ ನೀರು ಹರಿದು ಹೋಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಅಭಾವ ಎದುರಾಗಲಿದೆ. ಕರ್ನಾಟಕ ರಾಜ್ಯದ ರೈತರಿಗೆ ದ್ರೋಹ ಮಾಡಲಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸಂಸದೆ, ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣಗೌಡ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ, ಯುವ ಮುಖಂಡರಾದ ಇಂಡುವಾಳು ಸಚ್ಚಿದಾನಂದ, ಅಶೋಕ್ ಜಯರಾಂ, ಡಾ.ಎನ್.ಎಸ್.ಇಂದ್ರೇಶ್, ಎಸ್.ಪಿ.ಸ್ವಾಮಿ, ಸಿ.ಟಿ.ಮಂಜುನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net