

ಮಂಡ್ಯ: ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ರಕ್ತದಲ್ಲಿ ಹೆಬ್ಬೆಟ್ಟು ಮುದ್ರೆ ಹೊತ್ತುವ ಮೂಲಕ ಮಂಗಳವಾರ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂತೆಯೇ ಹೆಬ್ಬೆಟ್ಟು ಮುದ್ರೆ ಮಾಡಿದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಅವರ ಮೂಲಕ ರಾಜ್ಯಪಾಲರಿಗೆ ರವಾನಿಸಿದರು.
ರಾಜ್ಯ ತೀವ್ರ ಬರಗಾಲವನ್ನು ಎದುರಿಸುತ್ತಿದ್ದು, ಜನ ಜಾನುವಾರುಗಳಿಗೆ ಕುಡಿಯುವ ನೀರು, ರೈತರ ಬೆಳೆಗಳಿಗೆ ನೀರು ಇಲ್ಲದ ಪರಿಸ್ಥಿತಿ ಎದುರಾಗಿದೆ. ಆದರೂ ರಾಜ್ಯ ಸರ್ಕಾರ ತ.ನಾಡಿಗೆ ನೀರು ಹರಿಸುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರು-ಮೈಸೂರು ಸೇರಿದಂತೆ ಹಲವು ಪ್ರದೇಶಕ್ಕೆ ಕುಡಿಯಲು ನೀರು ಸಹ ಇಲ್ಲದಂತಾಗುತ್ತದೆ. ಹಾಗಾಗಿ ತಾವುಗಳು ಮಧ್ಯಪ್ರವೇಶಿಸಿ ತ.ನಾಡಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಲು ಕ್ರಮವಹಿಸಿ ರಾಜ್ಯದ ಜನರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಶಿವಕುಮಾರ ಆರಾಧ್ಯ, ಸಿದ್ದರಾಜುಗೌಡ, ಹೊಸಹಳ್ಳಿ ಶಿವು, ಡಣಾಯಕನಪುರ ರವಿಕುಮಾರ್, ಯೋಗೇಶ್, ಚಂದ್ರ, ನಿತ್ಯ ಇತರರಿದ್ದರು.