

ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿ ಮತ್ತು ಬಿಜೆಪಿ ಎಸ್‌ಸಿ, ಎಸ್‌ಟಿ ಮೋರ್ಚಾ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಕಳೆದ ಒಂಭತ್ತು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದೆ. ಕರ್ನಾಟಕದಲ್ಲಿ ಆರ್ಥಿಕ ಪರಿಸ್ಥಿತಿ ತೀರ ಹದಗೆಟ್ಟಿದ್ದು, ಚುನಾವಣೆಯಲ್ಲಿ ತಮ್ಮ ಗೆಲುವಿನ ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ರೂ.೧೧,೧೪೪ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುತ್ತಿದ್ದಾರೆ. ಇದರಿಂದ ಬಡವರ ಜನಜೀವನ ಅಸ್ಥವ್ಯಸ್ಥವಾಗಿದೆ ಎಂದು ದೂರಿದರು.
ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಮೊಗೇರ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಬಂದ ನಂತರ ದಲಿತ ವಿರೋಧಿ ನೀತಿಯನ್ನು ಅನುಸರಿಸಲಾಗುತ್ತಿದೆ. ಪರಿಶಿಷ್ಟ ಜಾತಿಗೆ ಸಂಬಂಧಿಸಿದ ಇಲಾಖೆಗಳಲ್ಲಿ ಅನುದಾನದ ಕೊರತೆ ಎದುರಾಗಿದೆ. ಬಿಟ್ಟಿ ಭಾಗ್ಯದಿಂದಾಗಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ೧೪೦ಕ್ಕೂ ಹೆಚ್ಚು ಕೋಟಿ ಹಣವನ್ನು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ಇಲಾಖೆಗಳಿಗೆ ನೀಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಈ ಬಗ್ಗೆ ಮನವರಿಗೆ ಮಾಡುವ ಕೆಲಸ ಆಗಬೇಕು. ಸಮುದಾಯದವರು ಜಾಗೃತಗೊಳ್ಳಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರನ್ನು ಒಟ್ಟುಗೂಡಿಸಿ ಕಾರ್ಡ್ ಚಳವಳಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಪ್ರತಿಭಟನಾ ನಿರತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಜಿಲ್ಲಾಡಳಿತ ಮೂಲಕ ಮನವಿಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಎಸ್.ಟಿ.ಮೋರ್ಚಾದ ರಾಜ್ಯ ಉಪಾಧ್ಯಕ್ಷೆ ಕೆ.ಆರ್.ಮಂಜುಳಾ, ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್, ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್, ಪ್ರಮುಖರಾದ ಸುಬ್ರಮಣ್ಯ ಉಪಾಧ್ಯಯ, ರಾಬಿನ್ ದೇವಯ್ಯ, ಬಿ.ಬಿ.ಭಾರತೀಶ್, ತಳೂರು ಕಿಶೋರ್ ಕುಮಾರ್, ಕನ್ನಿಕೆ, ಜಗದೀಶ್, ಯಮುನಾ ಚಂಗಪ್ಪ ಸೇರಿದಂತೆ ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.