

ಮೈಸೂರು: ರಾಜ್ಯ ಸರ್ಕಾರವು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು, ಸರ್ಕಾರ, ಸಿಎಂ, ಡಿಸಿಎಂ ವಿರುದ್ಧ ಘೋಷಣೆ ಕೂಗಿದರು.
ಕಳೆದ 9 ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯ ಕುರಿತು ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ ಆ ಸಮುದಾಯವನ್ನು ವಂಚಿಸಿದೆ. ದಲಿತರಿಗೆ ಮೀಸಲಿಟ್ಟಿದ್ದ 11,144 ಕೋಟಿ ರೂ. ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿದ್ದು, ದಲಿತ ಹಿತವನ್ನು ಬಲಿಕೊಟ್ಟು ತಮ್ಮ ಸ್ವಾರ್ಥ ಸಾಧನೆ ಪೂರೈಸಿಕೊಂಡು ಇವರ ಢೋಂಗಿ ದಲಿತ ಕಾಳಜಿಯನ್ನು ಬಯಲು ಮಾಡಿದೆ ಎಂದು ಪ್ರತಿಭಟನಾಕಾರರು ದೂರಿದರು.
ದಲಿತರ ಹಿತರಕ್ಷಣೆ ಮಾಡಬೇಕಿದ್ದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಈ ಅನ್ಯಾಯದ ವಿರುದ್ಧ ಸೊಲ್ಲೆತ್ತದೆ ಆ ಪಕ್ಷದ ಹಿತಕ್ಕೆ ದಲಿತ ಸಮುದಾಯದ ಹಿತವನ್ನು ಬಲಿ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಅಲ್ಪಸಂಖ್ಯಾತರಿಗೆ 10,000 ಕೋಟಿ ರೂ. ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿಯೂ ಅಡ್ಡ ಬಂದಿಲ್ಲ. ಇವರಿಗೆ ದಲಿತರ ಹಿತಾಸಕ್ತಿಗಿಂತ ವೋಟ್ ಬ್ಯಾಂಕ್ ರಾಜಕಾರಣವು ಆದ್ಯತೆಯಾಗಿರುವುದು ಶೋಚನೀಯ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುರಾರ್ಜಿ ಶಾಲೆಯ ಅಭಿವೃದ್ಧಿ ಮತ್ತು ಹೊಸ ಶಾಲೆಗಳ ಆರಂಭಕ್ಕೆ ಮೀಸಲಾದ ಹಣವು ಇತರ ಯೋಜನೆಗಳಿಗೆ ಬಳಕೆಯಾಗಿ ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಇದಲ್ಲದೆ ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ ಹಣವು ಕೂಡ ದುರ್ಬಳಕೆಯಾಗಿದೆ. ಗ್ಯಾರಂಟಿ ಯೋಜನೆಯ ಸಲುವಾಗಿ ಪರಿಶಿಷ್ಟ ವಿದ್ಯಾರ್ಥಿಗಳ ಶಿಕ್ಷಣವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ದೂರಿದರು.
ಪರಿಶಿಷ್ಟರ ಗೃಹ ನಿರ್ಮಾಣ ಯೋಜನೆಯು ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಸಾವಿರಾರು ಮನೆಗಳನ್ನು ನಿರ್ಮಿಸಿ ಹಂಚುತ್ತಿದ್ದರೆ, ರಾಜ್ಯ ಸರ್ಕಾರದ ಯೋಜನೆಯು ಕೋಮಾ ಸ್ಥಿತಿಗೆ ತಲುಪಿದೆ. ರೈತ ನಿಧಿ ಯೋಜನೆಯಲ್ಲಿ ದಲಿತ ಕುಟುಂಬದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವೂ ಸ್ಥಗಿತಗೊಂಡಿದೆ. ಕಿಸಾನ್ ಸಮ್ಮಾನ್ ಯೋಜನೆಗೆ ಹೆಚ್ಚುವರಿಯಾಗಿ ನೀಡುತ್ತಿದ್ದ 4,000 ರೂ. ಕತ್ತರಿ ಹಾಕಲಾಗಿದೆ ಎಂದರು.
ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ವಾಪಸ್ ಪಡೆದು, ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆ ಮಾಡಬೇಕು. ಈ ಮೂಲಕ ದಲಿತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ನಿರ್ಣಯ ಪತ್ರವನ್ನು ಸಲ್ಲಿಸಲಾಯಿತು. ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮಾಜಿ ಶಾಸಕ ಹರ್ಷವರ್ಧನ್, ಎಂ.ಶಿವಣ್ಣ, ಮುಖಂಡರಾದ ಎನ್.ವಿ.ಪಣೀಶ್, ಮಹಾದೇವಯ್ಯ, ಸಂದೇಶ್ ಸ್ವಾಮಿ, ಮಂಗಳಾಶೇಖರ್, ಬಿ.ಪಿ.ಮಂಜುನಾಥ್, ಸುರೇಶ್ ಬಾಬು ಇತರರಿದ್ದರು.