

ನಂಜನಗೂಡು: ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆ ಸರಿಯಲ್ಲ ಎಂದು ಆರೋಪಿಸಿ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೂ ಮುನ್ನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಿಜೆಪಿ ಕಾರ್ಯಕರ್ತರು, ಬಳಿಕ ಶಿವಕುಮಾರ್ ಭಾವಚಿತ್ರವನ್ನು ಸುಟ್ಟು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕರಂಗನಾಯಕ ಮಾತನಾಡಿ, ಕಾಂಗ್ರೆಸ್ ಸರ್ಕಾರ ನೆಹರು ಕಾಲದಿಂದಲೂ ಸಂವಿಧಾನದ ಮೇಲೆ ಗದಾಪ್ರಹಾರ ಮಾಡುತ್ತಿದೆ. ಇದೀಗ ಮತ್ತೆ ಕಾಂಗ್ರೆಸ್ ಸರ್ಕಾರದ ಬಣ್ಣ ಬಯಲಾಗಿದೆ. ಸಂವಿಧಾನ ಬದಲಾವಣೆ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ ಎಂದು ಕಿಡಿಕಾರಿದರು.
ಸಂವಿಧಾನ ರಕ್ಷಣೆ ಮಾಡುವುದಾಗಿ ಭರವಸೆ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಅಧಿಕಾರಕ್ಕೆ ಬಂದ ನಂತರ ಸಂವಿಧಾನಕ್ಕೆ ಅಗೌರವ ತೋರುತ್ತಿದೆ. ಎಸ್ಸಿ-ಎಸ್ಟಿ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡು ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಅಲ್ಲದೆ ಹನಿಟ್ರಾೃಪ್ ಬಗ್ಗೆ ಉನ್ನತ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಕೆಂಡಗಣ್ಣಪ್ಪ, ಸಿದ್ದರಾಜು, ಜಿಲ್ಲಾ ಯುವ ಮೋರ್ಚಾ ಸದಸ್ಯರಾದ ಮಧುರಾಜ್, ಮಹದೇವಸ್ವಾಮಿ, ಶ್ರೀನಿವಾಸ ರೆಡ್ಡಿ, ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಬದನವಾಳು ಮಂಜುನಾಥ್, ಮಹದೇವ ಪ್ರಸಾದ್, ವಳಗೆರೆ ಪುಟ್ಟಸ್ವಾಮಿ, ರಾಘವೇಂದ್ರ, ಸಿದ್ದು, ಸಚಿನ್, ಮನೋಜ್ ಇತರರು ಇದ್ದರು.