

ಹಾಸನ: ಪಿಎಂಎವೈ ವಸತಿ ಯೋಜನೆಯಲ್ಲಿ ನಡೆದಿರುವ ಅವ್ಯವಹಾರ ಖಂಡಿಸಿ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ಜಿಲ್ಲಾ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಬಿಜೆಪಿ ಕಾರ್ಯಕರ್ತರು ಜಿ.ಪಂ. ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಹಾಗೂ ಭ್ರಷ್ಟ ಅಧಿಕಾರಿಗಳನ್ನು ಅಮಾತನುಗೊಳಿಸುವಂತೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಶಾಸಕ ಸಿಮೆಂಟ್ ಮಂಜು ಮಾತನಾಡಿ, ಸಕಲೇಶಪುರ ಹಾಗೂ ಅರಸೀಕೆರೆ ತಾಲೂಕುಗಳಲ್ಲಿ 3 ಕೋಟಿ ರೂ.ಗೂ ಅಧಿಕ ಪ್ರಮಾಣದಲ್ಲಿ ಅವ್ಯವಹಾರ ನಡೆದಿದೆ. ಸರ್ಕಾರದ ಭ್ರಷ್ಟ ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳು ಲೂಟಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಜಿಲ್ಲಾಡಳಿತ ಹಾಗೂ ಉಸ್ತುವಾರಿ, ವಸತಿ ಸಚಿವರಿಗೆ ಮನವಿ ಸಲ್ಲಿಸಿದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು.
ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರನ್ನು ಅಮಾನತುಗೊಳಿಸಿ ಕಾನೂನಿನಡಿಯಲ್ಲಿ ಶಿಕ್ಷೆ ವಿಧಿಸುವಂತಾಗಬೇಕು ಎಂದು ಹೇಳಿದರು. ಸರಿಯಾದ ರೀತಿಯಲ್ಲಿ ಕ್ರಮ ಆಗದಿದ್ದಲ್ಲಿ ಜಿ.ಪಂ. ಕಚೇರಿ ಎದುರು ಆಮರಣಾಂತರ ಹೋರಾಟ ಕೈಗೊಳ್ಳುವುದರ ಜತೆಗೆ, ವಿಧಾನಸೌಧದ ಎದುರು ಹೋರಾಟ ರೂಪಿಸುವುದಾಗಿ ಎಚ್ಚರಿಸಿದರು.
ಜಿಲ್ಲೆಯ ಬೇಲೂರು, ಸಕಲೇಶಪುರ, ಅರಸೀಕೆರೆ ತಾಲೂಕಿನಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಇದೇ ರೀತಿ ರಾಜ್ಯಾದ್ಯಂತ ಆಗಿರುವ ಶಂಕೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ, ಬಡವರಿಗೆ ಅನುಕೂಲ ಕಲ್ಪಿಸುವ ಯೋಜನೆಯಲ್ಲಿ ಅವ್ಯವಹಾರ ನಡೆಸಿ ಸರ್ಕಾರದ ಹಣವನ್ನು ಲೂಟಿ ಮಾಡಲಾಗುತ್ತಿದೆ. ಅವ್ಯವಹಾರ ನಡೆಯಲು ವೈಫಲ್ಯ ಯಾರದು ಎಂದು ತನಿಖೆಗೊಳಪಡಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತಾಗಬೇಕು ಎಂದರು.
ಜಿ.ಪಂ. ಸಿಇಒ ಪೂರ್ಣಿಮಾ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಗಿರೀಶ್, ಕುಮಾರ್, ಅಶ್ವಥ್, ಉಮಾ ರವಿಪ್ರಕಾಶ್, ಶೋಭನ್ ಬಾಬು ಇತರರು ಇದ್ದರು.