

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಕರೊನಾ ತೀವ್ರಗತಿಯಲ್ಲಿ ಏರುವ ಮೂಲಕ ಆತಂಕ ಸೃಷ್ಟಿಸಿದ್ದರೂ, ಕೋವಿಡ್ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳ ಅತಿರೇಕಕ್ಕೆ ಕಡಿವಾಣ ಬಿದ್ದಂತಿಲ್ಲ. ಹೆಚ್ಚುತ್ತಿರುವ ಕರೊನಾ ಪ್ರಕರಣಗಳ ನಡುವೆಯೇ ಒಂದೆಡೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದರೆ, ಮತ್ತೊಂದೆಡೆ ಆಡಳಿತಾರೂಢ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ಮುಂದಾಗಿದೆ.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ತವರು ಕ್ಷೇತ್ರವಾಗಿರುವ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ನಾಳೆ ನಡೆಯಲಿದ್ದು, ಇಂದು ಆ ಕುರಿತ ಸಕಲ ತಯಾರಿ ಮಾಡಿಕೊಳ್ಳಲಾಗುತ್ತಿದೆ. ನಗರದ ಖಾಸಗಿ ಕಲ್ಯಾಣಮಂಟಪದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ.
ಇದರಲ್ಲಿ ನೂರಾರು ಮಂದಿ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ. ಮಾತ್ರವಲ್ಲ ಈ ಸಭೆಯಲ್ಲಿ ಸಚಿವ ಸುಧಾಕರ್, ಸಚಿವ ಅಶ್ವತ್ಥನಾರಾಯಣ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೂಡ ಪಾಲ್ಗೊಳ್ಳುವ ಸಾಧ್ಯತೆಗಳು ಇವೆ. ಸಭೆ ಹಿನ್ನೆಲೆಯಲ್ಲಿ ನಗರದಲ್ಲಿ ಇಂದೇ ಪಕ್ಷದ ಬಾವುಟಗಳು, ಬ್ಯಾನರ್ಗಳು ರಾರಾಜಿಸಲಾರಂಭಿಸಿವೆ.
ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು 53 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 183ಕ್ಕೆ ತಲುಪಿದೆ.