

ಮಂಡ್ಯ: ಬಿಜೆಪಿ ಪಕ್ಷ ಜಿಲ್ಲೆಯಲ್ಲಿ ಉತ್ತಮವಾಗಿ ಸಂಘಟನೆಗೊಳ್ಳುತ್ತಿದೆ. ಇದರಲ್ಲಿ ಕಾರ್ಯಕರ್ತರ ಶ್ರಮ ಹೆಚ್ಚಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ ಹೇಳಿದರು.
ತಾಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದ ಕಾಲಭೈರವೇಶ್ವರ ಸಮುದಾಯ ಭವನದಲ್ಲಿ ಬಿಜೆಪಿ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಗ್ರಾಮಾಂತರ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗುವ ಮೂಲಕ ಉತ್ತಮ ಆಡಳಿತವನ್ನು ದೇಶದಲ್ಲಿ ನೀಡುತ್ತಿದ್ದಾರೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ನೇತೃತ್ವದಲ್ಲಿ ಲಕ್ಷಾಂತರ ಮತಗಳಲ್ಲಿ ಲೀಡ್ ನೀಡಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಂಡಿದ್ದೇವೆ. ಜತೆಗೆ ರಾಜ್ಯದಲ್ಲಿ 19 ಸೀಟುಗಳನ್ನು ಗೆದ್ದುಕೊಂಡಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಜನರು ಹೈರಾಣಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಅಧಿಕಾರಕ್ಕಾಗಿ ಕಿತ್ತಾಡಿಕೊಂಡು ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕಿ ನಿಂತಿರುವ ಕಾರಣಕ್ಕೆ ಮತದಾರರು ಹಿಡಿಶಾಪ ಹಾಕುತ್ತಿದ್ದಾರೆ ಎಂದರು.
ಬಿಜೆಪಿ ರಾಜ್ಯ ವೈದ್ಯಕೀಯ ಪ್ರಕೋಷ್ಠಕ ಡಾ.ಸದಾನಂದ, ಗ್ರಾಮಾಂತರ ಅಧ್ಯಕ್ಷ ಭೀಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿವೇಕ್, ಗ್ರಾ.ಪಂ ಸದಸ್ಯ ಶಂಕರಾಚಾರಿ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜವರೇಗೌಡ, ಗ್ರಾಮಾಂತರ ಪ್ರಕೋಷ್ಠ ಕಾರ್ಯದರ್ಶಿಗಳಾದ ಶಿವಕುಮಾರ್ ಆರಾಧ್ಯ, ಶಿವಕುಮಾರ್, ಮಹಿಳಾ ಮೋರ್ಚಾ ಅಧ್ಯಕ್ಷೆ ಜ್ಯೋತಿ, ಮುಖಂಡ ಬಿಳಿದೇಗಲು ಚಂದ್ರಶೇಖರ್ ಭಾಗವಹಿಸಿದ್ದರು.