

ಮಂಡ್ಯ: ಬಳ್ಳಾರಿಯಲ್ಲಿ ನ.20ರಂದು ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ರಾಜ್ಯ ಮಟ್ಟದ ಸಮಾವೇಶ ಆಯೋಜಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದಗಾಲು ಶಿವಣ್ಣ ತಿಳಿಸಿದರು.
ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಕೊಪ್ಪಳ, ರಾಯಚೂರು, ಚಿತ್ರದುರ್ಗ, ಬಳ್ಳಾರಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಮಾವೇಶಕ್ಕೆ ಆಗಮಿಸಲಿದ್ದಾರೆ. ಬಿಜೆಪಿ ಸರ್ಕಾರ ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ಮಾಡುತ್ತಿಲ್ಲ ಎಂದು ಪ್ರತಿಪಕ್ಷಗಳು ಆರೋಪ ಮಾಡಿದ್ದವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ಮಾಡುವ ಮೂಲಕ ಈ ಮಾತನ್ನು ಸುಳ್ಳಾಗಿಸಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಇದು ಬಿಜೆಪಿಯ ಬದ್ಧತೆಗೆ ಸ್ಪಷ್ಟ ನಿದರ್ಶನ. ಇದಕ್ಕಾಗಿ ಎಸ್‌ಟಿ ಸಮುದಾಯದ ಪರವಾಗಿ ಬೊಮ್ಮಾಯಿ, ಪಕ್ಷಕ್ಕೆ ಮಾರ್ಗದರ್ಶನ ಮಾಡುತ್ತಿರುವ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಾಗೂ ರಾಜ್ಯ ಸಚಿವ ಸಂಪುಟಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರು, ಕೋರ್ ಕಮಿಟಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಾಗ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ನಮನ ಸಲ್ಲಿಸಿ ವಾಲ್ಮೀಕಿ ಸಮುದಾಯದ ಆತ್ಮಾಭಿಮಾನ ಹೆಚ್ಚಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್ ಕೇವಲ ಮತಬ್ಯಾಂಕ್ ರಾಜಕೀಯದಲ್ಲಿ ಈ ಸಮುದಾಯವನ್ನು ಬಳಸಿಕೊಂಡಿತ್ತು. ಆದರೆ, ಬಿಜೆಪಿ ಹೆಚ್ಚಿನ ಆದ್ಯತೆ ಕೊಡುತ್ತಿದೆ. ಸಮಾವೇಶಕ್ಕೆ ಎಲ್ಲ ತಾಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.
ಮಾಧ್ಯಮ ವಕ್ತಾರ ನಾಗಾನಂದ್, ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಹಾಜರಿದ್ದರು.