ಗ್ಯಾರಂಟಿ ಯೋಜನೆಗೆ ಮೀಸಲು ಹಣ ಬಳಕೆ: ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ

BJP SC Morcha protest mandya
Published on

ಮಂಡ್ಯ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಹಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜೈ ಶ್ರೀರಾಮ್, ಜೈ ಭೀಮ್ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಜಯ ಘೋಷ ಮೊಳಗಿಸಿದರು. ಅಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ಪ್ರಿಯಾಂಕ ಖರ್ಗೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು. ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮನವಿ ಸ್ವೀಕರಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿದ್ದ ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ 11,114 ಕೋಟಿ ರೂಗಳನ್ನು ಐದು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವುದಾಗಿ ರಾಜ್ಯಸರ್ಕಾರ ಲಿಖಿತ ರೂಪದಲ್ಲಿ ನೀಡಿದೆ. ಇಂತಹ ನಡೆ ಸಂವಿಧಾನ ವಿರೋಧಿಯಾಗಿದೆ. ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟು ಹಣವನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡಿರುವುದು ಎಸ್‌ಸಿಪಿ ಕಾಯ್ದೆಯ ಉಲ್ಲಂಘನೆಯಾಗಿದೆ. ಪರಿಶಿಷ್ಟ ಸಮುದಾಯಕ್ಕೆ ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಕಿತ್ತುಕೊಂಡಿರುವ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ. ದಲಿತರಿಗೆ ಮಾಡಿರುವ ದ್ರೋಹ ಇದಾಗಿದೆ. ಆದ್ದರಿಂದ ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿರುವ ಹಣವನ್ನು ಕೂಡಲೇ ವಾಪಸ್ ಪಡೆದು ಪರಿಶಿಷ್ಟ ಕಲ್ಯಾಣ ಕಾರ್ಯಕ್ರಮಗಳಾದ ಗಂಗಾ ಕಲ್ಯಾಣ ಮತ್ತು ವಸತಿ ಶಾಲೆಗಳ ಭೂಮಿ ಖರೀದಿ ಮಾಡಲು ಬಳಸಬೇಕು ಎಂದು ಆಗ್ರಹಿಸಿದರು.

ಇನ್ನು ವಿಧಾನಸಭೆಯ ಮೀಸಲು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಶಾಸಕರಾಗಿರುವವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಿಶಿಷ್ಟ ವಿರೋಧಿ ನಡೆಯನ್ನು ಖಂಡಿಸುತ್ತಿಲ್ಲ. ಇದು ಕಾಂಗ್ರೆಸ್ ಪಕ್ಷದ ದಲಿತ ವಿರೋಧಿ ನಡೆಗೆ ಸಾಕ್ಷಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ಪರಿಶಿಷ್ಟ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್‌ಗೌಡ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ನಿತ್ಯಾನಂದ, ಜಿಲ್ಲಾಧ್ಯಕ್ಷ ಎನ್.ಎಸ್.ಇಂದ್ರೇಶ್, ಮುಖಂಡರಾದ ಅಶೋಕ್ ಜಯರಾಂ, ಟಿ.ಶ್ರೀಧರ್, ಎಸ್.ಮಲ್ಲೇಶ್, ಸಿ.ಟಿ.ಮಂಜುನಾಥ್, ಹೊಸಹಳ್ಳಿ ಶಿವು, ಜೋಗಿಗೌಡ, ಶಿವಲಿಂಗಯ್ಯ, ಸಿದ್ದರಾಜುಗೌಡ, ಉದಯಕುಮಾರ್, ಎನ್.ವಸಂತ್‌ಕುಮಾರ್, ಲೋಕೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net