ಗ್ಯಾರಂಟಿ ಯೋಜನೆಗೆ ದಲಿತ ಮೀಸಲು ನಿಧಿ ವಿರೋಧಿಸಿ ಬಿಜೆಪಿ ಪ್ರತಿಭಟನೆ

bjp
Published on

ಮಂಗಳೂರು: ದಲಿತ ಸಮುದಾಯಕ್ಕೆ ಬಜೆಟ್‌ನಲ್ಲಿ ಮೀಸಲಿರಿಸಿದ 11 ಸಾವಿರ ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿದೆ ಎಂದು ಆರೋಪಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಸಿ- ಎಸ್‌ಟಿ ಮೋರ್ಚಾ ವತಿಯಿಂದ ನಗರದ ಮಿನಿ ವಿಧಾನ ಸೌಧ ಮುಂಭಾಗ ಸೋಮವಾರ ಪ್ರತಿಭಟನೆ ನಡೆಯಿತು.


ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ, ದಲಿತ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿ ಅನ್ಯಾಯ ಎಸಗಿದೆ. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹೆಸರು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಇದೀಗ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.


ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಮಾತನಾಡಿ, ದಲಿತ ಮೀಸಲು ನಿಧಿಯನ್ನು ಗ್ಯಾರಂಟಿ ಯೋಜನೆಗೆ ಬಳಸಿರುವ ಕಾಂಗ್ರೆಸ್ ಸರ್ಕಾರ ಇದೇ ರೀತಿ ಮಾಡಿದರೆ ಮೂರು ತಿಂಗಳ ಬಳಿಕ ರಾಜ್ಯದಲ್ಲಿ ಅಧಿಕಾರದಲ್ಲಿ ಇರುತ್ತದೆ ಎಂಬ ವಿಶ್ವಾಸವಿಲ್ಲ ಎಂದರು.


ಬಿಜೆಪಿ ಎಸ್‌ಸಿ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ವಿನಯನೇತ್ರ ದಡ್ಡಲಕಾಡು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್‌ಕುಮಾರ್ ಬೊಟ್ಯಾಡಿ, ಹಿರಿಯ ಮುಖಂಡ ನಿತಿನ್ ಕುಮಾರ್, ಉಪಮೇಯರ್ ಸುನೀತಾ, ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ ಬೆಳುವಾಯಿ, ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ.ಮಂಜುಳಾ ರಾವ್, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಮಾಧ್ಯಮ ಪ್ರಮುಖರಾದ ವಸಂತ ಪೂಜಾರಿ, ಮನೋಹರ ಶೆಟ್ಟಿ, ಪ್ರಮುಖರಾದ ಗುರುಚರಣ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net