ಎಲ್ಲ ಸ್ಥಾನ ಗೆಲ್ಲುವ ಸಂಕಲ್ಪಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿ.ವೈ.ವಿಜಯೇಂದ್ರ ಹೇಳಿಕೆ

mng-nov22-vijayendra2
Published on

ಮಂಗಳೂರು: ರಾಜ್ಯದ ಉದ್ದಗಲಕ್ಕೂ ನಿರಂತರ ಪ್ರವಾಸ ಮಾಡಿ ಹಿರಿಯರ ಮಾರ್ಗದರ್ಶನದಂತೆ ಪಕ್ಷ ಸಂಘಟಿಸಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ತನಕ ವಿರಮಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.


ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬುಧವಾರ ಮಂಗಳೂರಿಗೆ ಆಗಮಿಸಿದ ಅವರು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆಯೋಜಿಸಿದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.


ದಕ್ಷಿಣ ಕನ್ನಡ ಬಿಜೆಪಿಗೆ ಭದ್ರ ಬುನಾದಿ ಹಾಕಿದ ಜಿಲ್ಲೆ. ಹಿರಿಯರಾದ ವಿ.ಎಸ್.ಆಚಾರ್ಯ, ಸಿ.ಜೆ.ಕಾಮತ್, ನಾರಾಯಣ ಶೆಟ್ಟಿ ಮೊದಲಾದವರ ಶ್ರಮದ ಫಲವಾಗಿ ಬಿಜೆಪಿ ಭದ್ರವಾಗಿ ಬೇರೂರಲು ಕಾರಣವಾಗಿದೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ಈಶ್ವರಪ್ಪ, ಸದಾನಂದ ಗೌಡ ಮೊದಲಾದವರು ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅವರೆಲ್ಲರ ಮಾರ್ಗದರ್ಶನದಲ್ಲಿ ಮುನ್ನಡೆದು ಪಕ್ಷವನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.


ಬಿಜೆಪಿ ನಿಕಟಪೂರ್ವ ಅಧ್ಯಕ್ಷರು, ಶಾಸಕರಾದ ಉಮಾನಾಥ ಕೋಟ್ಯಾನ್, ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಕ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಮಾಜಿ ಸದಸ್ಯೆ ತಾರಾ ಅನುರಾಧ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನೀತಾ, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ಹೇರಳೆ, ತಿಮ್ಮೇಶ್ ಗೌಡ, ರಾಮ್‌ದಾಸ್ ಮೊದಲಾದವರು ಉಪಸ್ಥಿತರಿದ್ದರು. ಬಿ.ವೈ.ವಿಜಯೇಂದ್ರ ಹಾಗೂ ನಿಕಟಪೂರ್ವ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರ.ಕಾರ್ಯದರ್ಶಿ ಕಸ್ತೂರಿ ಪಂಜ ಸ್ವಾಗತಿಸಿದರು. ಸತೀಶ್ ಕುಂಪಲ ವಂದಿಸಿದರು.

ತುಳುವಿನಲ್ಲಿ ಮಾತು ಆರಂಭ
ಕುಡ್ಲದ ಮಹಾ ಜನತೆಗ್ ಎನ್ನ ನಮಸ್ಕಾರ. ಪರಶುರಾಮ ಸೃಷ್ಟಿದ ನಾಡ್, ಕಂಬಳ ಸಂಸ್ಕೃತಿದ ಬೀಡು ಎಂದು ತುಳುವಿನಲ್ಲಿ ಭಾಷಣ ಆರಂಭಿಸಿದ ವಿಜಯೇಂದ್ರ, ಬಳಿಕ ಕನ್ನಡದಲ್ಲಿ ಮುಂದುವರಿಸಿದರು. ಕೇಂದ್ರದ ವರಿಷ್ಠರು ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಭರವಸೆ ಇದೆ. ಅಧಿಕಾರದ ಕೊನೇ ದಿನಗಳ ತನಕ ಕಾರ್ಯಕರ್ತರು ತಲೆತಗ್ಗಿಸುವ ರೀತಿಯ ಕೆಲಸ ಮಾಡುವುದಿಲ್ಲ. ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಪಕ್ಷ ಸಂಘಟನೆ ಮಾಡಿ ಗೆಲುವು ಸಾಧಿಸುವುದೇ ನಮ್ಮ ಧ್ಯೇಯ ಎಂದರು.

ಜಾತಿ ಗಣತಿಗೆ ವಿರೋಧವಿಲ್ಲ
ಜಾತಿ ಗಣತಿಗೆ ಬಿಜೆಪಿ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷರು, ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿರುವಾಗಲೇ ಜಾತಿ ಗಣತಿ ಮುಗಿದಿತ್ತು. ಆಗ ಯಾವುದೇ ಸ್ಪಷ್ಟ ನಿಲುವು ತೆಗೆದುಕೊಳ್ಳದೆ, ಈಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಮತ್ತೆ ಜಾತಿ ಗಣತಿ ವಿಷಯ ಪ್ರಸ್ತಾಪಿಸುತ್ತಿದ್ದಾರೆ. ರಾಜಕೀಯ ದುರುದ್ದೇಶಕ್ಕೆ ಜಾತಿ ಗಣತಿ ಬಳಸಲು ಹೊರಟರೆ ಅದಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net