

ತುಮಕೂರು: ಬಿಜೆಪಿ ಮುಖಂಡರ ವಿರುದ್ಧದ ಪ್ರಕರಣಗಳಲ್ಲಿ ರಾಜ್ಯ ಸರ್ಕಾರದ ತರಾತುರಿ ನೋಡಿದರೆ ಇದರಲ್ಲಿ ರಾಜಕೀಯ ಷಡ್ಯಂತ್ರವಿದೆ ಎನ್ನಿಸದಿರದು. ಸೂಕ್ತ ತನಿಖೆಯಿಂದಷ್ಟೇ ಸತ್ಯ ಹೊರಬರಲು ಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದರು.
ನಗರದಲ್ಲಿ ಪಕ್ಷದ ಸದಸ್ಯತ್ವ ಭಾಗವಾಗಿ ಆಯೋಜಿಸಿದ್ದ ಕಾರ್ಯಕರ್ತರ ವಿಶೇಷ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೂಡಾ ಹಗರಣ ಬಯಲಾಗಿದ್ದರಿಂದ ಹತಾಶರಾಗಿದ್ದು ಇಂತಹ ಸಣ್ಣಮಟ್ಟದ ರಾಜಕೀಯಕ್ಕಿಳಿದಿದ್ದಾರೆ. ಕಳೆದ ಎರಡು ತಿಂಗಳಿನಿಂದಲೂ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದು ಮುಂದುವರಿಸುತ್ತೇವೆ ಎಂದು ಘೋಷಿಸಿದರು.
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು ಇದರ ಸತ್ಯಾಸತ್ಯತೆ ಬಗ್ಗೆ ನಮಗೆ ಮಾಹಿತಿ ಇಲ್ಲ. ಇಂತಹ ಪ್ರಕರಣದಲ್ಲಿ ಯಾರ ಪರವಾಗಿಯೂ ಪಕ್ಷ ನಿಲ್ಲುವುದಿಲ್ಲ. ಆದರೆ, ತನಿಖೆ ಸರಿಯಾದ ರೀತಿಯಲ್ಲಿ ನಡೆಯಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದರು.