

ಮೈಸೂರು: ಪ್ರತಿಪಕ್ಷಗಳು ಒಗ್ಗೂಡದೆ ಹೋದರೆ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದರು.
ಮೈಸೂರು ವಿಶ್ವ ವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನ ಮತ್ತು ವಿಸ್ತರಣ ಕೇಂದ್ರ ಶನಿವಾರ ಕೇಂದ್ರದ ವಿಶ್ವಜ್ಞಾನಿ ಸಭಾಂಗಣದಲ್ಲಿ ‘16ನೇ ವಿಧಾನಸಭಾ ಚುನಾವಣೆ- ಪ್ರಭಾವ, ಪರಿಣಾಮ ಮತ್ತು ಭವಿಷ್ಯದ ರಾಜಕೀಯ ಆಯಾಮಗಳು’ ವಿಷಯದ ಕುರಿತು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಪ್ರತಿ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಶೇ.36 ರಿಂದ 38ರಷ್ಟು ಮತಗಳನ್ನು ಪಡೆಯುತ್ತಾ ಬರುತ್ತಿದೆ. ಈ ಎರಡು ಪಕ್ಷಗಳು ಪಡೆಯುವ ಮತಗಳಿಗೆ ದೊಡ್ಡ ಅಂತರ ಇಲ್ಲ. ಹೀಗಾಗಿ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾದಾಗ ಸುಲಭವಾಗಿ ಮತ್ತೊಂದು ಪಕ್ಷ ಅಧಿಕಾರಕ್ಕೆ ಬರುತ್ತದೆ. ಹಾಗಾಗಿ ಉತ್ತಮ ಆಡಳಿತ ನೀಡಿದರೆ ಮಾತ್ರ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಸಾಧ್ಯ. ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಿದರೆ ಮುಂದಿನ ಬಾರಿಯೂ ಅಧಿಕಾರಕ್ಕೆ ಬರುವುದು ನಿಶ್ಚಿತ. ಆದರೆ, ಲೋಕಸಭೆ ಚುನಾವಣೆಯಲ್ಲಿ ಮತದಾರರ ಮನಸ್ಥಿತಿ ಬದಲಾಗುತ್ತದೆ. ಹಾಗಾಗಿ ಲೋಕಸಭೆ ಚುನಾವಣೆಯನ್ನು ಬೇರೆ ಆಯಾಮದಿಂದ ಎದುರಿಸಬೇಕು ಎಂದು ಹೇಳಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಮುಖಂಡರ ಸಭೆಯನ್ನು ಜೂ.23 ರಂದು ಪಾಟ್ನಾದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಎಲ್ಲ ಪ್ರತಿಪಕ್ಷಗಳು ಒಗ್ಗೂಡುವುದೇ ಎಂದು ಕಾದು ನೋಡಬೇಕಾಗಿದೆ. ಪ್ರತಿಪಕ್ಷಗಳು ಒಂದಾಗದೆ ಇದ್ದರೆ ಹಳೆಯ ಫಲಿತಾಂಶವೇ ಮರುಕಳಿಸುತ್ತದೆ. ದೇಶದಲ್ಲಿ 142 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯುತ್ತದೆ. ಈ ಕ್ಷೇತ್ರಗಳ ಪೈಕಿ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಈ ಬಾರಿ ಗೆಲುವು ಸಾಧಿಸಿದ್ದು, ಈ ಕ್ಷೇತ್ರಗಳಲ್ಲಿ ಗೆಲುವಿಗೆ ಕಾಂಗ್ರೆಸ್ ತಂತ್ರಗಾರಿಕೆ ರೂಪಿಸಿದರೆ ಉತ್ತಮ ಫಲಿತಾಂಶ ಬರುತ್ತದೆ ಎಂದರು.