

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಮೇಯರ್ ಮಂಗೇಶ ಪವಾರ ಹಾಗೂ ಜಯಂತ ಜಾಧವ ಅವರ ಸದಸ್ಯತ್ವ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಹೋಗಲು ಸಿದ್ಧ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಇರುವುದು ಹಾಗೂ ಸಾಮಾನ್ಯ ವರ್ಗದವರು ಮೇಯರ್ ಆಗಿರುವುದನ್ನು ಸಹಿಸಿಕೊಳ್ಳದೆ ಕಾಂಗ್ರೆಸ್ ಸರ್ಕಾರ ರಾಜಕೀಯ ಪ್ರೇರಿತವಾಗಿ ಹೀಗೆ ಮಾಡಿದೆ ಎಂದು ಆರೋಪಿಸಿದರು.
ನಗರದಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಕೋಟ್ಯಂತರ ರೂ. ವೆಚ್ಚದಲ್ಲಿ ತಿನಿಸು ಕಟ್ಟೆ ನಿರ್ಮಿಸಲಾಗಿದೆ. ಸಾರ್ವಜನಿಕವಾಗಿ ಹರಾಜು ಕೂಗಿ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ಮೇಯರ್ ಅಧಿಕಾರ ದುರ್ಬಳಕೆ ಪ್ರಶ್ನೆಯೇ ಬರುವುದಿಲ್ಲ. ಏಕೆಂದರೆ, ಹರಾಜು ಸಂದರ್ಭದಲ್ಲಿ ಇವರ್ಯಾರು ಸದಸ್ಯರಾಗಿ ಆಯ್ಕೆಯಾಗಿರಲಿಲ್ಲ. ಆದರೂ ಸದಸ್ಯತ್ವ ರದ್ದುಗೊಳಿಸಿದ್ದಾರೆ ಎಂದು ದೂರಿದರು.
ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬರಲಿದ್ದು, ಪಾಲಿಕೆ ಮೇಯರ್ ಸ್ಥಾನಕ್ಕೆ ಯಾವುದೇ ಸಮಸ್ಯೆ ಇಲ್ಲ. ಜೂ.2ರಂದು ನಡೆಯುವ ಪಾಲಿಕೆ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಮೇಯರ್ ಮತ ಚಲಾಯಿಸಲಿದ್ದಾರೆ. ಕಾಂಗ್ರೆಸ್ನವರಿಗೆ ತಾಕತ್ತಿದ್ದರೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ನಡೆಸಲಿ. ಇಲ್ಲದಿದ್ದರೆ ಅಧಿಕಾರದಲ್ಲಿರುವ ಬಿಜೆಪಿ ಆಡಳಿತಕ್ಕೆ ಸಹಕಾರ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಶಾಸಕರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಈ ವಿಷಯನ್ನು ಇಲ್ಲಿಗೆ ಬಿಡುವುದಿಲ್ಲ. ಅಧಿಕಾರಿಗಳು ಸೇರಿ ಎಲ್ಲರಿಗೂ ಪಾಠ ಕಲಿಸುತ್ತೇವೆ. ರಾಜಕೀಯ ಒತ್ತಡಕ್ಕೆ ಮಣಿದು ಪ್ರಾದೇಶಿಕ ಆಯುಕ್ತರು ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ್ದರು. ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ನಗರಾಭಿವೃದ್ಧಿ ಇಲಾಖೆ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಆದೇಶ ಹೊರಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.