ಅಪಪ್ರಚಾರ ವಿರೋಧಿಸಿ ಎಸ್ಪಿಗೆ ದೂರು: ಕಾನೂನು ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮನವಿ

BJP workers appeal for legal action Mandya
Published on

ಮಂಡ್ಯ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆಂದು ಆರೋಪಿಸಿ ಗಿರೀಶ್ ಮಟ್ಟಣ್ಣ, ಮಹೇಶ್‌ಶೆಟ್ಟಿ ತಿಮ್ಮರೋಡಿ, ಸಮೀರ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿದ ಕಾರ್ಯಕರ್ತರು ಮನವಿ ಸಲ್ಲಿಸಿದರು. ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂಳಿದ್ದು ತನಿಖೆ ನಡೆಸಿ ಎನ್ನುವ ಅನಾಮಿಕ ವ್ಯಕ್ತಿ ಯಾರು ಎಂಬ ಬಗ್ಗೆ ಯಾರಿಗೂ ಮಾಹಿತಿ ಇಲ್ಲ. ನಿರ್ದಿಷ್ಟ ಸ್ಥಳಗಳಲ್ಲಿ ಅನಾಥ ಮೃತದೇಹ ಹೂತಿದ್ದಾಗಿ ಒಂದು ತಿಂಗಳ ಹಿಂದೆ ಹೇಳಿಕೆ ನೀಡಿದ್ದು, ಅದರಂತೆ ಎಸ್‌ಐಟಿ ಮಾರ್ಗದರ್ಶನದಲ್ಲಿ ಹತ್ತಾರು ಕಡೆ ಉತ್ಕನನ ನಡೆಸಿದೆ. ಆದರೆ ಆತನ ಆರೋಪದಲ್ಲಿ ಯಾವುದೇ ಹುರುಳು ಇದ್ದಂತೆ ಕಾಣುತ್ತಿಲ್ಲ ಎಂದು ವರದಿಯಾಗಿದೆ. ಆತ ಯಾವ ಆಧಾರದಲ್ಲಿ ಆರೋಪ ಮಾಡುತ್ತಿದ್ದಾನೆ ಎಂಬುದು ಸ್ಪಷ್ಟವಾಗಬೇಕು. ಆತನ ಹಿಂದಿರುವ ಕಾಣದ ಕೈಗಳ ಬಗ್ಗೆ ಕೂಲಂಕುಶ ತನಿಖೆಯಾಗಬೇಕು. ಜತೆಗೆ ಗಿರೀಶ್ ಮಟ್ಟಣ್ಣನವರ್, ತಿಮ್ಮರೋಡಿಯನ್ನು ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.

ಧರ್ಮಸ್ಥಳ ಗ್ರಾಮದಲ್ಲಿ ಅನಾಥ ಮೃತದೇಹಗಳನ್ನು ಹೂಳಿದ ವಿಚಾರಕ್ಕೆ ಸಂಬಂಧಿಸಿದಂತೆ ಅನಾಮಿಕನ ದೂರಿನ ಮೇರೆಗೆ ನಡೆಯುತ್ತಿರುವ ವಿಶೇಷ ತನಿಖಾ ತಂಡದ ತನಿಖೆಗೆ ಬಿಜೆಪಿ ಸಂಪೂರ್ಣ ಬೆಂಬಲ ಇದೆ. ಆದರೆ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಎಡಪಂಥೀಯರ ಸಹಿತ ಸಾಮಾಜಿತ ಜಾಲತಾಣಗಳಲ್ಲಿ ತೇಜೋವಧೆ ನಡೆಯುತ್ತಿದೆ. ಈ ರೀತಿ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿರುವ ಜಾಲತಾಣಗಳಿಗೆ ಕೂಡಲೇ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಎಸ್‌ಐಟಿ ತನಿಖೆ ಸಂದರ್ಭ ನಡೆದಿರುವ ಅಹಿತಕರ ಘಟನೆ ಹಾಗೂ ದೇವಸ್ಥಾನದ ಮೇಲೆ ತೇಜೋವಧೆ ಮಾಡುವುದರ ಹಿಂದೆ ಎಡಪಂಥೀಯರ ಷಡ್ಯಂತ್ರ ಕಂಡುಬರುತ್ತಿದೆ. ಎಡಪಂಥೀಯರ ಒತ್ತಾಯದ ಮೇರೆಗೆ ಧರ್ಮಸ್ಥಳ ಗ್ರಾಮದ ಕೇಸನ್ನು ಎಸ್‌ಐಟಿಗೆ ಹಸ್ತಾಂತರಿಸಿದಾಗಿ ಸಚಿವ ದಿನೇಶ್ ಗುಂಡೂರಾವ್ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಎಸ್‌ಐಟಿ ತನಿಖೆಗಾಗಿ ತಮಿಳುನಾಡಿನ ಕಾಂಗ್ರೆಸ್ ಸಂಸದರೊಬ್ಬರು ತಮ್ಮ ಪಕ್ಷದ ವರಿಷ್ಠರ ಮೂಲಕ ಒತ್ತಡ ಹಾಕಿರುವ ಸಂಗತಿಗಳು ಕೇಳಿಬರುತ್ತಿವೆ. ಇದೆಲ್ಲವೂ ಹಿಂದುಗಳ ಶ್ರದ್ಧಾಕೇಂದ್ರಗಳನ್ನು ಧಮನಿಸುವ ಷಡ್ಯಂತ್ರದ ಭಾಗವೇ ಆಗಿದೆ ಎಂದು ಆರೋಪಿಸಿದ್ದಾರೆ.

ಅಲ್ಲಿ ಮದುವೆಯಾದ ಸಹಸ್ರಾರು ಹೆಣ್ಣುಮಕ್ಕಳಿಗೆ ಅಪಮಾನ ಮಾಡಿದ್ದಾರೆ. ಸಾವಿರಕ್ಕೂ ಹೆಚ್ಚು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದ್ದು, ಡಿಸ್‌ಮ್ಯಾಂಟಲಿಂಗ್ ಗ್ಲೋಬಲ್ ಹಿಂದುತ್ವ ಎಂಬ ಶೀರ್ಷಿಕೆಯಡಿ ನಡೆಯುತ್ತಿರುವ ಹಿಂದು ಧರ್ಮದ ವಿರುದ್ಧ ಪಿತೂರಿಯಾಗಿದ್ದು, ಇದೊಂದು ಸಂಘಟಿತ ಯೋಜಿತ ಷಡ್ಯಂತ್ರವಾಗಿದೆ. ಈ ಹಿನ್ನೆಲೆಯಲ್ಲಿ ಸಮೀರ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮ್ಮರೋಡಿ ಅವರನ್ನು ತನಿಖೆಗೆ ಒಳಪಡಿಸಬೇಕು ಎದು ಒತ್ತಾಯಿಸಿದ್ದಾರೆ.

ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಚಂದ್ರು, ಹೊಸಹಳ್ಳಿ ಶಿವು, ಮಾದರಾಜೇ ಅರಸ್, ನಾಗಣ್ಣ ಮಲ್ಲಪ್ಪ, ಗೊರವಾಲೆ ಶಿವಣ್ಣ, ಆನಂದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net