

ಮಂಡ್ಯ: ಕೇಂದ್ರ ಸರ್ಕಾರ ರಾಜ್ಯದ ಪಾಲಿನ ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲವೆಂದು ಕಾಂಗ್ರೆಸ್ ಮುಖಂಡರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ 5,495 ಕೋಟಿ ರೂ ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲವೆಂದು ಹೇಳುತ್ತಿರುವುದು ಸಂಪೂರ್ಣ ಸುಳ್ಳು. ರಾಜ್ಯಕ್ಕೆ ಸಿಗಬೇಕಾದ ಪ್ರತಿ ಪೈಸೆಯನ್ನು ಸಕಾಲದಲ್ಲಿ ಬಿಡುಗಡೆ ಮಾಡಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಅಂದರೆ 2014ರಿಂದ 2024ರವರೆಗೆ ರಾಜ್ಯದ ತೆರಿಗೆ ಹಂಚಿಕೆಯಲ್ಲಿ ಶೇ.258ರಷ್ಟು ಹೆಚ್ಚಾಗಿದೆ. ಇದು ಯುಪಿಎ ಆಡಳಿತದ 10 ವರ್ಷಕ್ಕೆ ಹೋಲಿಸಿದರೆ ಮೂರೂವರೆ ಪಟ್ಟು ಹೆಚ್ಚಾಗಿದೆ. ಈ ಸಂಬಂಧ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಸ್ಪಷ್ಟನೆ ನೀಡಿದ್ದಾರೆಂದು ವಿವರಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡಿ ಜನರನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇದು ಚುನಾವಣಾ ತಂತ್ರವಾಗಿದ್ದು, ಮತದಾರರ ತಲೆಗೆ ಸುಳ್ಳನ್ನು ತುಂಬುವ ಕೆಲಸವಾಗಿದೆ. ಬರ ಪರಿಸ್ಥಿತಿ ನಿಭಾಯಿಸಲು ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್) ಅಡಿ ಅನುದಾನ ಬಿಡುಗಡೆ ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಆದ್ದರಿಂದ ನ್ಯಾಯಾಲಯದಲ್ಲಿ ತೀರ್ಪು ಬರುವವರೆವಿಗೂ ಯಾವ ಹೇಳಿಕೆಯನ್ನು ನೀಡದಂತೆ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಹೊಸಹಳ್ಳಿ ಶಿವು, ಎಂ.ಎಸ್.ನಂದೀಶ, ವಿನೋದ, ಸತೀಶ, ಯೋಗೇಶ, ಮಹಂತಪ್ಪ, ಎಂ.ಕೆ. ನಾಗಾನಂದ, ಹೇಮಲತಾ ಇತರರಿದ್ದರು.