ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹ: ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

BJP workers protest Mandya
Published on

ಮಂಡ್ಯ: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಸಚಿವರು ಹಾಗೂ ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮಾತ್ರವಲ್ಲದೆ ಪ್ರಿಯಾಂಕ್ ಖರ್ಗೆ ಹಾಗೂ ರಾಜ್ಯಸರ್ಕಾರದ ವಿರುದ್ಧ ಗೋಡೆಗಳ ಮೇಲೆ ಫೋಸ್ಟರ್ ಅಂಟಿಸಿ ಆಕ್ರೋಶ ಹೊರಹಾಕಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಅವಧಿಯಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ ನೀಡಿದ್ದಾರೆ. ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ, ಕೋಲಾರ ಡಿಸಿ ಡಿ.ಕೆ.ರವಿ ಆತ್ಮಹತ್ಯೆ, ಕಲಬುರಗಿಯ ದಕ್ಷ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಹತ್ಯೆ, ಅನ್ನಭಾಗ್ಯ ಹಗರಣದ ಸಾಕ್ಷೃ ಸಂಗ್ರಹಿಸಿದ್ದ ಐ.ಎ.ಎಸ್ ಅಧಿಕಾರಿ ಅನುರಾಗ್ ತಿವಾರಿ ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವು ಪ್ರಕರಣ ನಡೆದಿವೆ. ಇದಲ್ಲದೆ ಹೂವಿನ ಹಡಗಲಿಯಲ್ಲಿ ಡಿವೈಎಸ್‌ಪಿಯಾಗಿದ್ದ ಅನುಪಮಾ ಶೆಣೈ ಅವರಿಗೆ ಕಿರುಕುಳ ನೀಡಿ ನೌಕರಿಗೆ ರಾಜೀನಾಮೆ ನೀಡುವಂತೆ ಮಾಡಲಾಗಿತ್ತು. ಸಾಕಷ್ಟು ಪ್ರಕರಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಇದ್ದಾಗ ನಡೆದಿವೆ ಎಂದು ದೂರಿದರು.

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಕಟ್ಟಿತೂಗಾಂವ್ ಗ್ರಾಮದ ನಿವಾಸಿ ಸಿವಿಲ್ ಇಂಜಿನಿಯರ್ ಸಚಿನ್ ಮಾನಪ್ಪ ಪಾಂಚಾಳ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಕಾಂಗ್ರೆಸ್ ಮುಖಂಡ ರಾಜು ಕಪನೂರ ಸೇರಿ ಎಂಟು ಜನರು ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಡೆತ್‌ನೋಟ್ ಬರೆದಿಟ್ಟಿದ್ದಾರೆ. ಸಚಿನ್ ಕುಟುಂಬಕ್ಕೆ ನ್ಯಾಯ ಸಿಗಬೇಕು ಹಾಗೂ ನ್ಯಾಯಯುತವಾದ ಪಾರದರ್ಶಕವಾದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕೆಂದರೆ ಕೂಡಲೇ ಪ್ರಿಯಾಂಕಾ ಖರ್ಗೆ ಅವರು ರಾಜೀನಾಮೆ ನೀಡಬೇಕು. ಈ ಹಿಂದೆ ಕೆ.ಎಸ್.ಈಶ್ವರಪ್ಪ ಅವರ ಪ್ರಕರಣದಲ್ಲಿ ಇದೇ ರೀತಿ ಆಪಾದನೆ ಬಂದಾಗ ಹಾಗೂ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಂಬಂಧಪಟ್ಟವರು ರಾಜೀನಾಮೆ ನೀಡಿದ್ದರು. ಆದರೀಗ ಬಿಜೆಪಿಯವರು ಬಟ್ಟೆಹರಿದುಕೊಂಡರು ರಾಜೀನಾಮೆ ನೀಡುವುದಿಲ್ಲ ಎನ್ನುವುದು ಪ್ರಿಯಾಂಕಾ ಖರ್ಗೆ ಅವರ ಬಂಡತನದ ಹೇಳಿಕೆಗೆ ಜನ ತಕ್ಕ ಉತ್ತರ ನೀಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಶಿವಕುಮಾರ್ ಆರಾಧ್ಯ, ಹೊಸಹಳ್ಳಿ ಶಿವು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net