

ಮಂಡ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಮಾತಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಕೇಂದ್ರ ಸಚಿವ ಅಮಿತ್ ಷಾ ಅವರಿಗೆ ರಕ್ತದಲ್ಲಿ ಹೆಬ್ಬೆಟ್ಟು ಹಾಕಿರುವ ಪತ್ರವನ್ನು ನಗರದ ಜಿಲ್ಲಾ ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನಿರಂತರವಾಗಿ ಕಿಡಿ ಕಾರುತ್ತಿರುವ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬುದ್ಧಿ ಹೇಳಿ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಯತ್ನಾಳ ಅವರು ವಕ್ಫ್ ಬೋರ್ಡ್ ವಿಚಾರವಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ ಅದು ಕಾಂಗ್ರೆಸ್ ಪಕ್ಷದ ಪರವಾಗಿಯೋ ಅಥವಾ ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಅವರ ವಿರುದ್ದವೋ ಗೊತ್ತಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಯಾಗುತ್ತಿದೆ. ಇಂತಹ ಹೊತ್ತಿನಲ್ಲಿ ಸಲ್ಲದ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ ಯತ್ನಾಳ ಅವರಿಂದ ತೀವ್ರ ಮುಜುಗರ ಉಂಟಾಗುತ್ತಿದೆ. ಕಾರ್ಯಕರ್ತರಲ್ಲಿಯೂ ಗೊಂದಲ ಏರ್ಪಟ್ಟಿದೆ. ಇದಕ್ಕೆ ಅವಕಾಶ ಮಾಡಿಕೊಡದೇ ಕೇಂದ್ರ ಸಚಿವರು ಹಾಗೂ ರಾಷ್ಟ್ರಮಟ್ಟದ ನಾಯಕರು ಬಸನಗೌಡ ಪಾಟೀಲ ಯತ್ನಾಳ ಅವರಿಗೆ ತಿಳಿ ಹೇಳಬೇಕು ಎಂದು ಮನವಿ ಮಾಡಿದರು.
ಮುಖಂಡರಾದ ಶಿವಕುಮಾರ ಆರಾಧ್ಯ, ನಂಜುಂಡಸ್ವಾಮಿ, ಹೊಸಹಳ್ಳಿ ಶಿವು, ಪ್ರಸನ್ನಕುಮಾರ್, ಎಚ್.ಕೆ.ಮಂಜುನಾಥ್, ವಿ.ನಾಗರಾಜು ಇದ್ದರು.