

ಮೈಸೂರು: ರಾಜ್ಯದಲ್ಲಿ ಬಿಜೆಪಿ ಕೈಗೊಂಡಿರುವ ಬರ ಅಧ್ಯಯನಕ್ಕೆ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಬರ ಅಧ್ಯಯನ ಮಾಡಿ ಹೋಗಿದ್ದು, ಕೇಂದ್ರದಲ್ಲಿ ನಿಮ್ಮದೇ ಸರ್ಕಾರ ಇದ್ದು, ನೀವು ಕೇಂದ್ರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರಕ್ಕೆ ರಾಜ್ಯದ ಬರ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟು ಅನುದಾನ ಪಡೆಯುವುದನ್ನು ಬಿಟ್ಟು ಇಲ್ಲಿ ಪ್ರವಾಸ ಮಾಡಿದರೆ ಏನು ಪ್ರಯೋಜನ. ನಿಮ್ಮ ಬರ ಅಧ್ಯಯನ ಪ್ರವಾಸದಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಟೀಕಿಸಿದರು.
ನಾನು ನನ್ನ ಕ್ಷೇತ್ರದ ಜನರಿಗೋಸ್ಕರ ಕೆಲಸ ಮಾಡುತ್ತಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿ ಕುರಿತು ಮಾತುಕತೆ ನಡೆಸಲು ಸಿಎಂ, ಡಿಸಿಎಂ ಬಳಿ ಹೋಗುತ್ತೇನೆ, ಇದರಲ್ಲಿ ತಪ್ಪೇನಿದೆ? ನಾನು ಸಿಎಂ, ಡಿಸಿಎಂ ಅವರನ್ನು ಹೊಗಳುವುದನ್ನು ಸಹಿಸುತ್ತಿಲ್ಲ. ನನ್ನ ಕಚೇರಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಫಾಲೋಅಪ್ ಮಾಡಿಸುತ್ತಿದ್ದೇನೆ, ಇದರಿಂದ ನನ್ನ ಕ್ಷೇತ್ರದ ಜನರಿಗೆ ಅನುಕೂಲವಾಗಿದೆ. ಆದರೆ, ಬಿಜೆಪಿಯವರು ಅದೆಲ್ಲ ಕಾಂಗ್ರೆಸ್ ಗ್ಯಾರಂಟಿ ಯೋಜನೆ, ಅದಕ್ಕೆ ನೀವೇಕೆ ಉತ್ತೇಜನ ನೀಡುತ್ತೀರಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಸರ್ಕಾರ ಯಾವುದಾದರೂ ಇರಲಿ, ಜನಕ್ಕೆ ಒಳ್ಳೆಯದು ಮಾಡುವುದು ಬೇಡವೇ ಎಂದು ಪ್ರಶ್ನಿಸಿದರು.