

ಶಿವಮೊಗ್ಗ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ಬಳಿಕ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜೂ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. 16ರಂದು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿರುವುದು ಭ್ರಷ್ಟ ಹಾಗೂ ದುಷ್ಟ ಸರ್ಕಾರ. ಇದನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಬಿಜೆಪಿ ವಿರಮಿಸುವುದಿಲ್ಲ ಎಂದು ಗುಡುಗಿದರು.
13ರಂದು ನಡೆಯುವ ಪ್ರತಿಭಟನಾ ಸಭೆಯಲ್ಲಿ ಪಕ್ಷದ ಎಲ್ಲ ಶಾಸಕರು, ಸಂಸದರು, ಕಾಲ್ತುಳಿತ ಪ್ರಕರಣದಲ್ಲಿ ಜೀವ ಕಳೆದುಕೊಂಡವರ ಕುಟುಂಬದವರು, ಸಾಮಾನ್ಯ ಜನರು, ಈ ಸರ್ಕಾರದ ಆಡಳಿತದಿಂದ ಭ್ರಮನಿರಸನಗೊಂಡ ಸಾಮಾನ್ಯ ಜನರೂ ಸೇರಿದಂತೆ ಸುಮಾರು 20 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಾಲ್ತುಳಿತ ಪ್ರಕರಣದ ಬಗ್ಗೆ ಮಾಹಿತಿ ಪಡೆಯಲು ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆದಿದೆ. ಆದರೆ ಅವರ ರಾಜೀನಾಮೆ ಕೇಳುವ ಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡನ್ನೇ ಅಲ್ಲಾಡಿಸುವಷ್ಟು ಪ್ರಬಲರಾಗಿದ್ದಾರೆ. ಹೀಗಾಗಿ ಬಿಜೆಪಿ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತಿದೆ ಎಂದು ಹೇಳಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಾಲತೇಶ್, ಶಿವರಾಜ್, ಪ್ರಮುಖರಾದ ಕೆ.ವಿ.ಅಣ್ಣಪ್ಪ, ಚಂದ್ರಶೇಖರ್ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.