

ತರೀಕೆರೆ: ಅಜ್ಜಂಪುರ ಪಟ್ಟಣ ಪಂಚಾಯಿತಿ ಬಿಜೆಪಿ ವಶವಾಗಲಿದೆ ಎಂದು ಮಾಜಿ ಶಾಸಕ ಡಿ.ಎಸ್.ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಅಜ್ಜಂಪುರ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿ ಮಾತನಾಡಿ, ಪಟ್ಟಣ ಪಂಚಾಯಿತಿಗೆ ಮೊದಲ ಬಾರಿ ಚುನಾವಣೆ ನಡೆಯುತ್ತಿದ್ದು, ಎಲ್ಲ ವಾರ್ಡ್‌ಗಳಲ್ಲಿ ಬಿಜೆಪಿ ಸ್ಪರ್ಧೆ ನೀಡಿದೆ. ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದ್ದು, ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದರು.
ಅಂತಿಮ ಕಣದಲ್ಲಿ ಉಳಿದು ಕೊಂಡಿರುವ ಅಭ್ಯರ್ಥಿಗಳ ಜನಪರ ಸೇವೆ ಜತೆ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ, ಹಿಂದಿನ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಅಜ್ಜಂಪುರ ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿಸಿ, ಚತುಷ್ಪಥ ರಸ್ತೆ ನಿರ್ಮಾಣದ ಜತೆಗೆ ಕ್ಷೇತ್ರದಲ್ಲಿ ಕೈಗೊಂಡಿದ್ದ ಅಭಿವೃದ್ಧಿ ಕಾರ್ಯಗಳು ಗೆಲುವಿಗೆ ಪೂರಕವಾಗಿದೆ. ಕಾಂಗ್ರೆಸ್ ಸರ್ಕಾರದ ಎರಡುವರೆ ವರ್ಷದ ದುರಾಡಳಿತದಿಂದ ಬೇಸತ್ತಿರುವ ಜನತೆ ಪಟ್ಟಣ ಪಂಚಾಯಿತಿ ಚುನಾವಣೆ ಮೂಲಕ ಬುದ್ದಿ ಕಲಿಸಲು ಕಾಯುತ್ತಿದ್ದಾರೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ, ಮಾಜಿ ಅಧ್ಯಕ್ಷ ಬಿ.ಎಸ್.ಕಲ್ಮರುಡಪ್ಪ, ಜಿಪಂ ಮಾಜಿ ಅಧ್ಯಕ್ಷ ಕೆ.ಆರ್.ಧ್ರುವಕುಮಾರ್, ಮಾಜಿ ಉಪಾಧ್ಯಕ್ಷ ಎಸ್.ಬಿ.ಆನಂದಪ್ಪ, ಮಾಜಿ ಸದಸ್ಯ ಎಂ.ಕೃಷ್ಣಮೂರ್ತಿ, ಬಿಜೆಪಿ ಮಂಡಲ ಅಧ್ಯಕ್ಷ ಗರಗದಹಳ್ಳಿ ಪ್ರತಾಪ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಗಿರೀಶ್ ಚವ್ಹಾಣ್, ಪ್ರಮುಖರಾದ ರಂಗಸ್ವಾಮಿ, ಸಿದ್ದೇಗೌಡ, ಮತ್ತಿತರರಿದ್ದರು.