ಬಿ.ಎಲ್.ಸಂತೋಷ್ ಹೇಳಿಕೆ ಹತಾಶೆ

MUNIYAPPA KH
Published on

ಚಿತ್ರದುರ್ಗ: ಕಾಂಗ್ರೆಸ್ಸಿನ 45 ಶಾಸಕರು ನಮ್ಮ ಪಕ್ಷದ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ‌್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆ ಹತಾಶೆಯಿಂದ ಕೂಡಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನಿಂದ ಭ್ರಮನಿರಸನಗೊಂಡಿರುವ ಸಂತೋಷ್, ಬಿಜೆಪಿ ಶಾಸಕರ ವಲಸೆಯನ್ನು ನಿಯಂತ್ರಿಸಲು, ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಯನ್ನು ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ದೇಶದಲ್ಲಿ ಒಂದಾಗಿರುವ ಜಾತ್ಯತೀತ ಪಕ್ಷಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯಲಿವೆ. ಕೋಲಾರ ಕ್ಷೇತ್ರದ ಅಭ್ಯರ್ಥಿ ಯಾರೆಂದು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.

ಮಳೆ ಕೊರತೆಯಿಂದ ಕಾವೇರಿ ನದಿ ನೀರಿನ ಹಂಚಿಕೆ ಸಮಸ್ಯೆ ಕಾಣಿಸಿಕೊಂಡಿದ್ದು, ಮಳೆ ಆರಂಭವಾಗಿದ್ದು, ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಡಿಸೆಂಬರ್‌ನಲ್ಲಿ ಯುವ ನಿಧಿ ಯೋಜನೆ ಜಾರಿಯಾಗಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net