

ಗುಂಡ್ಲುಪೇಟೆ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಕಾವಲು ಪಡೆಯಿಂದ ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದರು. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದರೂ ರಾಜ್ಯದ ರೈತರ ಹಿತ ಕಾಪಾಡದೆ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಸಾರಿಗೆ ಬಸ್ ನಿಲ್ದಾಣದ ಎದುರು ಮಾನವ ಸರಪಳಿ ನಿರ್ಮಿಸಿ ವಾಹನಗಳ ಸಂಚಾರಕ್ಕೆ ರಸ್ತೆ ತಡೆಯೊಡ್ಡಿ ಸರ್ಕಾರ ಹಾಗೂ ನ್ಯಾಯಮಂಡಲಿ ವಿರುದ್ಧ ಘೋಷಣೆ ಕೂಗಿದರು.
ಕಾವಲು ಪಡೆಯ ತಾಲೂಕು ಅಧ್ಯಕ್ಷ ಎ.ಅಬ್ದುಲ್ ಮಾಲಿಕ್, ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಮಾಡ್ರಹಳ್ಳಿ ಸುಭಾಷ್, ಯೋಗೇಶ್, ಅಬ್ದುಲ್ ರಶೀದ್, ವೆಂಕಟೇಶ್ ಗೌಡ, ಮಂಜುನಾಥ್ ಇತರರು ಇದ್ದರು.