

ತಿ.ನರಸೀಪುರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿಯ ಸ್ವಾಮಿ ನರ್ಸಿಂಗ್ ಹೋಂನಲ್ಲಿ ಶುಕ್ರವಾರ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಡಿಯಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ನರಸೀಪುರ ವಿಧಾನಸಭಾ ಕ್ಷೇತ್ರದ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ ಚಾಲನೆ ನೀಡಿದರು. ಶಿಬಿರದಲ್ಲಿ ಪೂಜಿತ್ ಮೆಡಿಕಲ್ಸ್ ಕುಮಾರ್ ಸೇರಿದಂತೆ 30ಕ್ಕೂ ಹೆಚ್ಚು ರಕ್ತದಾನಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ರಕ್ತದಾನಿಗಳಿಗೆ ಸೇವಾ ಪ್ರಶಂಸನಾ ಪತ್ರ ವಿತರಿಸಲಾಯಿತು.
ಈ ವೇಳೆ ಕುಂಬ್ರಹಳ್ಳಿ ಸುಬ್ಬಣ್ಣ ಮಾತನಾಡಿ, ಕೇಂದ್ರ ಸರ್ಕಾರದ ಘನತವೆತ್ತ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸೇವಾ ಪಾಕ್ಷಿಕ ಅಡಿಯಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್, ಹಿರಿಯ ಶಸ್ತ್ರ ಚಿಕಿತ್ಸಕ ಡಾ.ಎಂ.ರೇವಣ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎನ್.ಎಂ.ರಾಮಚಂದ್ರ, ಸೇವಾ ಪಾಕ್ಷಿಕ ಉಸ್ತುವಾರಿ ಕಿರಣ್ ಜಯರಾಮೇಗೌಡ, ಕ್ಷೇತ್ರಾಧ್ಯಕ್ಷ ಶಿವಕುಮಾರ್, ಟೌನ್ ಅಧ್ಯಕ್ಷ ಕೆ.ನಂಜುಂಡಸ್ವಾಮಿ, ಕೆ.ಮಹದೇವಶೆಟ್ಟಿ, ಮುಖಂಡರಾದ ಸಿ.ಎಂ.ಪ್ರಕಾಶ್, ಎಸ್.ರಾಜಶೇಖರ, ಸೋಮಶೇಖರಪ್ಪ, ಕಾಳೇಗೌಡ, ಎಂ.ಸಿದ್ದಲಿಂಗಸ್ವಾಮಿ, ದರ್ಶನ್ ಇತರರು ಇದ್ದರು.