ಪಹಲ್ಗಾಮ್ ದಾಳಿ ಬೆನ್ನಲ್ಲೇ ಚಾಮರಾಜನಗರ ಜಿಲ್ಲಾಡಳಿತಕ್ಕೆ ಬಾಂಬ್ ಬೆದರಿಕೆ: ಹೆದರಿ ಹೊರ ಬಂದ ಅಧಿಕಾರಿಗಳು! Chamarajanagar

Chamarajanagar
Published on

Chamarajanagar : ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿ ಮಾಸುವ ಮುನ್ನವೇ ಚಾಮರಾಜನಗರದ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಬಂದಿದೆ.

ಇ-ಮೇಲ್​ನಲ್ಲಿ ಬಾಂಬ್ ಬೆದರಿಕೆ ಪತ್ರ ಬಂದಿದೆ. ವಿಷಯ ತಿಳಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಂದ ಹೊರಗೆ ಬಂದು ನಿಂತಿದ್ದಾರೆ. ಅಧಿಕಾರಿಗಳಲ್ಲಿ ಭೀತಿ ಉಂಟಾಗಿದ್ದು, ಕೆಲಸ ಮಾಡಲು ಹಿಂಜರಿಯುವಂತಾಗಿದೆ.

ಈ ಕುರಿತು ಎಸ್ಪಿ ಡಾ.ಬಿ.ಟಿ.ಕವಿತಾ ವಿಜಯವಾಣಿಯೊಂದಿಗೆ ಮಾತನಾಡಿ, ಬಾಂಬ್ ಬೆದರಿಕೆ ಬಂದಿದೆ. ಪರಿಶೀಲನೆ ಮಾಡಿಸುತ್ತಿದ್ದೇವೆ ಎಂದಿದ್ದಾರೆ.

Chamarajanagar

ಪಹಲ್ಗಾಮ್​ ದಾಳಿ ಹಿನ್ನೆಲೆ

ನಿನ್ನೆ (ಏಪ್ರಿಲ್​ 22) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಕಾಶ್ಮೀರದ ಸೌಂದರ್ಯವನ್ನು ನೋಡಲು ಬಂದಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ಇಸ್ರೇಲ್ ಮತ್ತು ಇಟಲಿಯ ತಲಾ ಒಬ್ಬರು, ಇಬ್ಬರು ಸ್ಥಳೀಯರು, ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 26 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ‘ದಿ ರೆಸಿಸ್ಟನ್ಸ್ ಫ್ರಂಟ್’ ವಹಿಸಿಕೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದಿಂದ 6 ಕಿ.ಮೀ ದೂರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬೈಸರನ್ ಕಣಿವೆಯ ಹುಲ್ಲುಗಾವಲಿನ ಪ್ರದೇಶವನ್ನು ವೀಕ್ಷಿಸುವಾಗ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಪ್ರವಾಸಿಗರನ್ನು ಸುತ್ತುವರೆದ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದರು. ಕೆಲವು ಭಯೋತ್ಪಾದಕರು, ಹೆಸರುಗಳನ್ನು ಕೇಳುತ್ತಾ ಮತ್ತು ಗುರುತಿನ ಚೀಟಿಗಳನ್ನು ನೋಡುತ್ತಾ, ಹಿಂದೂಗಳನ್ನು ಗುಂಡು ಹಾರಿಸಿ ಕೊಂದರು. ವಿಶೇಷವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡಂತೆ ತೋರುತ್ತದೆ. ಇಡೀ ಜಗತ್ತು ಈ ಘಟನೆಯನ್ನು ಖಂಡಿಸುತ್ತಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಭಯೋತ್ಪಾದಕರನ್ನು ನಿರ್ಮೂಲನೆ ಮಾಡದೇ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net