

ರಾಮನಗರ: ಬಾಲ ಕಾರ್ಮಿಕ ಪದ್ಧತಿ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಳಿಸಿದ ಮಕ್ಕಳು ಶಾಲೆಗಳಿಗೆ ಹೋಗುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಅವರು ಶಾಲೆ ಬಿಟ್ಟಿರುವುದು ಕಂಡುಬಂದರೆ ಅವರನ್ನು ಮರಳಿ ಶಾಲೆಗೆ ಕಳುಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಬಾಲಕಾರ್ಮಿಕರು ಕಂಡು ಬಂದ ಕೂಡಲೇ ಜಿಲ್ಲಾ ಮಟ್ಟದ ಕಾರ್ಯಪಡೆಯು ತಂಡದೊಂದಿಗೆ ದಾಳಿ ಮಾಡಿ ಬಾಲ ಕಾರ್ಮಿಕರನ್ನು ಬಿಡುಗಡೆಗೊಳಿಸಿ ಮುಂದಿನ ಕ್ರಮವಹಿಸಬೇಕು. ಮುಂಬರುವ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿಯ ಕುರಿತು ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಜಾಥಾ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಕಥೆ, ಭಾಷಣ, ಚರ್ಚಾ ಸ್ಪರ್ಧೆ, ಚಿತ್ರಕಲೆಯಂತಹ ಕಾರ್ಯಕ್ರಮಗಳನ್ನು ರೂಪಿಸಿ, ಆ ಮೂಲಕ ಬಾಲ ಕಾರ್ಮಿಕ ಪದ್ದತಿಯ ದುಷ್ಪರಿಣಾಮಗಳ
ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಜೂನ್ 13 ರಿಂದ 30ರ ವರೆಗೆ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸುವಂತೆಯೂ ಅವರು ತಿಳಿಸಿದರು.