ಮಹಿಳೆಯರಿಗೆ ಪ್ರಾತಿನಿಧ್ಯ ವಿಲ್ಲದೆ ಸ್ವಾಸ್ಥ್ಯ ಸಮಾಜದ ನಿರ್ಮಾಣ ಅಸಾಧ್ಯ

MDK05
Published on

ಮಡಿಕೇರಿ: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡದೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವುದು ಅಸಾಧ್ಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಅಭಿಪ್ರಾಯ ವ್ಯಕ್ತಪಡಿಸಿದರು.


ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ ೪೦ನೇ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷ ಗುರುತಿಸಲು ಹಿಂದೇಟು ಹಾಕುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕು. ಪ್ರತಿಯೊಂದು ಹಂತದಲ್ಲಿ ಮಹಿಳಾ ಕಾರ್ಯಕರ್ತೆಯರಿಗೆ ಸೂಕ್ತ ಸ್ಥಾನ ಮಾನ ನೀಡಲು ತಾವು ಬದ್ದರಾಗಿದ್ದೇವೆ ಎಂದು ತಿಳಿಸಿದರು.


ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ನೆಟ್ಟಾ ಡಿಸೋಜ ಹಾಗೂ ರಾಜ್ಯಧ್ಯಕ್ಷೆ ಡಾ.ಪುಷ್ಪ ಅಮರನಾಥ್ ನಿರ್ದೇಶನದ ಮೇರೆಗೆ ಹಮ್ಮಿಕೊಳ್ಳಲಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಮಹಿಳೆಯರ ರಾಜಕೀಯ ಸಬಲೀಕರಣದ ರಾಜೀವ್ ಗಾಂಧಿಯವರ ಕನಸು ನನಸಾಗಿಸಬೇಕು. ಸಂಸತ್ ಮತ್ತು ಅಸೆಂಬ್ಲಿಯಲ್ಲಿ ಮಹಿಳೆಯರಿಗೆ ೩೩% ಮೀಸಲಾತಿಗಾಗಿ ನಿರಂತರವಾಗಿ ಶ್ರಮಿಸುವಂತೆ ಕಾರ್ಯಕರ್ತೆಯರಿಗೆ ಕರೆ ನೀಡಿದರು.


ಮಹಿಳಾ ಕಾಂಗ್ರೆಸ್ ಪ್ರಮುಖರಾದ ಮೀನಾಕ್ಷಿ ಕೇಶವ, ಮೀನಾಜ್ ಪ್ರವೀಣ್, ತೋರೆರ ಪೊನ್ನಕ್ಕಿ, ಡಿಸಿಸಿ ಉಪಾಧ್ಯಕ್ಷರಾದ ಫಿಲೋಮಿನಾ, ಪ್ರಮುಖರಾದ ಶೈಲಾ ಕುಟ್ಟಪ್ಪ, ಫ್ಯಾನ್ಸಿ ಪಾರ್ವತಿ, ದೇವಜಾನು, ಜುಲೇಕಾಬಿ, ಪ್ರೇಮಾ ಲಿಂಗಪ್ಪ, ಎಚ್.ಕೆ.ಪ್ರೇಮಾ, ತೆನ್ನಿರ ಮೈನಾ ಸೇರಿದಂತೆ ಮಹಿಳಾ ಕಾಂಗ್ರೆಸ್ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆರಂಭದಲ್ಲಿ ಮಹಿಳಾ ಕಾಂಗ್ರೆಸ್ ಧ್ವಜಾರೋಹಣ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net